ADVERTISEMENT

Pahalgam Terror Attack | ರಾಜ್ಯದಲ್ಲಿ ಕಟ್ಟೆಚ್ಚರ: ಗೃಹ ಸಚಿವ ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2025, 7:31 IST
Last Updated 24 ಏಪ್ರಿಲ್ 2025, 7:31 IST
<div class="paragraphs"><p>ಜಿ. ಪರಮೇಶ್ವರ</p></div>

ಜಿ. ಪರಮೇಶ್ವರ

   

ಮೈಸೂರು: ‘ಬೆಂಗಳೂರು ಸೇರಿದಂತೆ ಇಡೀ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಡಿ.ಜಿ. ಅವರಿಗೆ ಸೂಚಿಸಿದ್ದೇನೆ. ದೇಶದ ಭದ್ರತೆ ವಿಚಾರದಲ್ಲಿ ರಾಜ್ಯ ಸರ್ಕಾರವು ಕೇಂದ್ರಕ್ಕೆ ಸಂಪೂರ್ಣ ಸಹಕಾರ ನೀಡಲಿದೆ’ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.

ಮೈಸೂರಿನಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಉಗ್ರರ ದಾಳಿ ವಿಚಾರದಲ್ಲಿ ನಮ್ಮ ಗುಪ್ತಚರ ವ್ಯವಸ್ಥೆ ವಿಫಲವಾಗಿದೆ. ಉಗ್ರರು ಸಾಕಷ್ಟು ಸಿದ್ಧತೆ ಮಾಡಿಕೊಂಡು, ಭಾರಿ ಶಸ್ತ್ರಾಸ್ತ್ರಗಳ ಸಮೇತ ದೇಶದ ಒಳಕ್ಕೆ ನುಗ್ಗಿದ್ದಾರೆ. ಇದೆಲ್ಲವನ್ನೂ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು’ ಎಂದರು. ಉಗ್ರರ ದಾಳಿಯಲ್ಲಿ ಕರ್ನಾಟಕದ ಮೂವರು ನಿಧನರಾಗಿದ್ದು, ಇಬ್ಬರ ಶವ ಈಗಾಗಲೇ ಬಂದಿದೆ. ಸರ್ಕಾರದಿಂದ ಗೌರವ ಸಲ್ಲಿಸಲಾಗುವುದು ಎಂದರು.

ADVERTISEMENT

ಉಗ್ರರ ದಾಳಿ ವಿಚಾರವಾಗಿ ಚರ್ಚಿಸಲು ಸರ್ವಪಕ್ಷ ಸಭೆ ಕರೆಯಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ‘ಇದು ದೇಶದ ಭದ್ರತೆಯ ವಿಚಾರ. ಇದರಲ್ಲಿ ಯಾರೂ ರಾಜಕೀಯ ಬೆರೆಸುವುದಿಲ್ಲ. ಕೇಂದ್ರ ಸರ್ಕಾರವು ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಎಲ್ಲ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬುದು ನಮ್ಮ ಆಗ್ರಹ. ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ಕರೆಯುತ್ತಿರುವುದು ಒಳ್ಳೆಯ ಬೆಳವಣಿಗೆ. ಕೇಂದ್ರ ಸರ್ಕಾರ ಈಗಾಗಲೇ ರಾಜತಾಂತ್ರಿಕವಾಗಿ ಕೆಲವು ತೀರ್ಮಾನಗಳನ್ನು ಕೈಗೊಂಡಿದ್ದು, ಸರ್ವಪಕ್ಷ ಸಭೆಯಲ್ಲಿ ಇನ್ನಷ್ಟು ಸಲಹೆ ನೀಡಲಾಗುವುದು’ ಎಂದು ಹೇಳಿದರು.

‘ಮೊದಲ ಬಾರಿ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು. ಇದೊಂದು ಐತಿಹಾಸಿಕ ಸಭೆ ಆಗಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.