
ಮೈಸೂರು: ‘ನಗರದ ಇಟ್ಟಿಗೆಗೂಡು ಪ್ರದೇಶದಲ್ಲಿ ನಿರ್ಮಿಸಲಾಗಿರುವ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಕಟ್ಟಡವನ್ನು ಖಾಸಗಿ ಉದ್ದೇಶಕ್ಕೆ ಬಳಸುವುದು ಅಕ್ಷಮ್ಯ. ಇದೊಂದು ಗಂಭೀರ ವಿಷಯವಾಗಿದ್ದು, ಈ ಬಗ್ಗೆ ಸಂಬಂಧಿಸಿದ ಸಚಿವಾಲಯಕ್ಕೆ ಮಾಹಿತಿ ನೀಡಿ ಕ್ರಮಕ್ಕೆ ಮನವಿ ಸಲ್ಲಿಸಲಾಗುವುದು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಈ ವಿಷಯದಲ್ಲಿ ರಾಜಿ ಇಲ್ಲ’ ಎಂದು ಹೇಳಿದ್ದಾರೆ.
‘ಆಗಿನ ಮುಡಾದಿಂದ ಪಾಸ್‌ಪೋರ್ಟ್ ಕಚೇರಿ ಸ್ಥಾಪನೆಗಾಗಿ ನಿರ್ಮಿಸಿದ ಸರ್ಕಾರಿ ಕಟ್ಟಡವನ್ನು ಹಲವು ವರ್ಷಗಳಿಂದ ಆ ಉದ್ದೇಶಕ್ಕೆ ಬಳಸದೆ ಖಾಸಗಿಯವರಿಗೆ ಕೊಟ್ಟಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ಗಂಭೀರ ಮತ್ತು ನಿಯಮಬಾಹಿರ’ ಎಂದಿದ್ದಾರೆ.
‘ಇದರಿಂದ ಸಾರ್ವಜನಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಸಿದುಕೊಂಡಂತಾಗುತ್ತದೆ’ ಎಂದು ಹೇಳಿದ್ದಾರೆ.
‘ಈ ಬಗ್ಗೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ತಕ್ಷಣ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮತ್ತು ಪಾಸ್‌ಪೋರ್ಟ್ ಕಚೇರಿಯನ್ನು ಅದೇ ಕಟ್ಟಡದಲ್ಲಿ ಶೀಘ್ರದಲ್ಲಿ ಪ್ರಾರಂಭಿಸುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.
‘ಮೈಸೂರು ಮತ್ತು ಸುತ್ತಲಿನ ಪ್ರದೇಶದ ಜನರಿಗೆ ಪಾಸ್‌ಪೋರ್ಟ್ ಸೇವೆಗಳು ಸುಲಭವಾಗಿ ಲಭ್ಯವಾಗಬೇಕಾದ್ದರಿಂದ, ಈ ವಿಷಯದಲ್ಲಿ ಯಾವುದೇ ವಿಳಂಬ ಆಗದಂತೆ ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ತ್ವರಿತವಾಗಿ ಕ್ರಮ ವಹಿಸಬೇಕು’ ಎಂದು ಯದುವೀರ್ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.