ADVERTISEMENT

ಕೆಎಸ್‌ಟಿಡಿಸಿಯಿಂದ ಅನಧಿಕೃತ ಜಂಗಲ್ ಲಾಡ್ಜಸ್– ರೆಸಾರ್ಟ್ಸ್: ಪಿಐಎಲ್ ವಜಾ

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 3:06 IST
Last Updated 5 ಜನವರಿ 2022, 3:06 IST
   

ಬೆಂಗಳೂರು: ಕೊಡಗು ಜಿಲ್ಲೆಯ ದುಬಾರೆ (ಆನೆಗಳ ಶಿಬಿರ) ಪ್ರವಾಸಿ ತಾಣದಲ್ಲಿ ಕರ್ನಾಟಕ ರಾಜ್ಯ ಪ್ರಾವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ಅನಧಿಕೃತವಾಗಿ ‘ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್’ ನಡೆಸುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಅರ್ಜಿದಾರರಿಗೆ ₹ 50 ಸಾವಿರ ದಂಡ ವಿಧಿಸಿದೆ.

ಪಿ.ಎಸ್.ಮೋಹನ್ ಸೇರಿದಂತೆ ಐವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ದಂಡದ ಮೊತ್ತವನ್ನು ಒಂದು ತಿಂಗಳ ಒಳಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಿ’ ಎಂದು ಅರ್ಜಿದಾರರಿಗೆ ಸೂಚಿಸಿದೆ.

‘ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್, ಕೆಎಸ್‌ಟಿಡಿಸಿ ನಿಯಂತ್ರಣಕ್ಕೆ ಒಳಪಟ್ಟಿದೆ. ಇದರ ವ್ಯವಸ್ಥಾಪಕ ನಿರ್ದೇಶಕರು ಐಎಫ್‌ಎಸ್ ಶ್ರೇಣಿಗೆ ಸೇರಿದ ಸರ್ಕಾರಿ ಅಧಿಕಾರಿ. ಇದರಲ್ಲಿ ಖಾಸಗಿ ವ್ಯಕ್ತಿಗಳ ಹಿತಾಸಕ್ತಿ ಇಲ್ಲ. ಆದ್ದರಿಂದ, ಜಂಗಲ್ ಲಾಡ್ಜ್‌ಸ್ ಮತ್ತು ರೆಸಾರ್ಟ್ಸ್ ನಿರ್ಮಿಸಲು ಕೇಂದ್ರ ಸರ್ಕಾರದ ಪೂರ್ವಾನುಮತಿ ಅಗತ್ಯವಿಲ್ಲ‘ ಎಂದು ನ್ಯಾಯಪೀಠ ತಿಳಿಸಿದೆ.

ADVERTISEMENT

‘ಅರ್ಜಿದಾರರು ದುರುದ್ದೇಶದಿಂದ ಪ್ರತಿವಾದಿಗಳ ಮೇಲೆ ಒತ್ತಡ ಉಂಟು ಮಾಡಲು ಈ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯದ ಅಮೂಲ್ಯ ಸಮಯ ವ್ಯರ್ಥ ಮಾಡುವ ಈ ನಡೆಗೆ ₹ 50 ಸಾವಿರ ದಂಡ ವಿಧಿಸಲಾಗುತ್ತಿದೆ’ ಎಂದು ಆದೇಶದಲ್ಲಿ ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.