ADVERTISEMENT

ಚುನಾವಣಾ ಆಯೋಗದ ವಿರುದ್ಧ ಲಕ್ಷ್ಮಣ್ ಕಿಡಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2019, 9:59 IST
Last Updated 1 ಅಕ್ಟೋಬರ್ 2019, 9:59 IST

ಮೈಸೂರು: ಚುನಾವಣಾ ಆಯೋಗವು ಬಿಜೆಪಿಗೆ ಅನುಕೂಲ ಮಾಡಿಕೊಡುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್‌ನ ರಾಜ್ಯ ಘಟಕದ ವಕ್ತಾರ ಎಂ.ಲಕ್ಷ್ಮಣ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ನವೆಂಬರ್ 11ರವರೆಗೆ ಬಿಜೆಪಿ ಸರ್ಕಾರ ಯಾವುದೇ ಯೋಜನೆಯನ್ನು ಘೋಷಿಸಿಬಹುದು ಎಂದು ಹೇಳುವ ಮೂಲಕ ಪರೋಕ್ಷವಾಗಿ ಮತದಾರರ ಮೇಲೆ ನೇರ ಪ್ರಭಾವ ಬೀರಲು ಆಯೋಗವೇ ಅವಕಾಶ ನೀಡಿದಂತಾಗಿದೆ ಎಂದು ಅವರು ಹರಿಹಾಯ್ದರು.

ಸುಪ್ರೀಂಕೋರ್ಟ್‌ನಲ್ಲಿ ಚುನಾವಣಾ ಆಯೋಗವನ್ನು ಪಾರ್ಟಿ ಮಾಡದೇ ಇದ್ದರೂ ಸ್ವಯಂಪ್ರೇರಿತರಾಗಿ ಕೋರ್ಟ್‌ಗೆ ಹಾಜರಾಗಿ ಅನರ್ಹರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇದೆ ಎಂದು ವಾದ ಮಂಡಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ ಎಂದು ಸಂಶಯ ವ್ಯಕ್ತಪಡಿಸಿದರು.

ADVERTISEMENT

ಚುನಾವಣಾ ಆಯೋಗ ಸೇರಿದಂತೆ ಎಲ್ಲ ಸ್ವಾಯತ್ತ ಸಂಸ್ಥೆಗಳು ತಮ್ಮ ಸ್ವಾತಂತ್ರ್ಯ ಕಳೆದುಕೊಂಡಿವೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಸಾಧ್ಯವಿಲ್ಲದಿದ್ದರೆ ಆಯೋಗವಾದರೂ ಏಕೆ ಬೇಕು ಎಂದು ಪ್ರಶ್ನಿಸಿದರು.

ಚಾಮುಂಡಿಬೆಟ್ಟದ ಮೇಲೆ ಈಚೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದ ಕಾಮಗಾರಿಗಳನ್ನು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದರು. ಒಟ್ಟು ₹ 80 ಕೋಟಿಯನ್ನು ನೀಡಿದ್ದರು. ಸೌಜನ್ಯಕ್ಕಾದರೂ ಸಿದ್ದರಾಮಯ್ಯ ಅವರ ಹೆಸರು ಹೇಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮುಖಂಡರಾದ ಮಂಜುಳಾ ಮಾನಸ ಮಾತನಾಡಿ, ‘ನಿಜಕ್ಕೂ ಸದ್ಯ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ. ಜನರ ಆಶಯಕ್ಕೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿ, ‘ಅ. 2ರಂದು ಬೆಳಿಗ್ಗೆ 10 ಗಂಟೆಗೆ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸರ್ವಧರ್ಮ ಪ್ರಾರ್ಥನೆ ಮಾಡಿ, ಸುಬ್ಬರಾಯರ ಕೆರೆಯ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದವರೆಗೆ ಜಾಥಾ ಹೊರಡಲಾಗುವುದು. ಉದ್ಯಾನದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲಾಗುವುದು’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.