ADVERTISEMENT

ಆಶ್ರಯ ಮನೆಗಳ ಕಾಮಗಾರಿ ಪುನರ್‌ ಆರಂಭಕ್ಕೆ ಒತ್ತಾಯ

ಕಾಂಗ್ರೆಸ್ ಮುಖಂಡ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2020, 13:40 IST
Last Updated 7 ಫೆಬ್ರುವರಿ 2020, 13:40 IST
ಮೈಸೂರಿನಲ್ಲಿ 5,296 ಆಶ್ರಯ ಮನೆಗಳ ನಿರ್ಮಾಣ ಕಾಮಗಾರಿ ನಿಲ್ಲಿಸಲಾಗಿದೆ. ಈ ಕಾಮಗಾರಿಯನ್ನು ಪುನರ್‌ ಆರಂಭಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಾಲಿಕೆ ಸದಸ್ಯೆ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಇದ್ದಾರೆ
ಮೈಸೂರಿನಲ್ಲಿ 5,296 ಆಶ್ರಯ ಮನೆಗಳ ನಿರ್ಮಾಣ ಕಾಮಗಾರಿ ನಿಲ್ಲಿಸಲಾಗಿದೆ. ಈ ಕಾಮಗಾರಿಯನ್ನು ಪುನರ್‌ ಆರಂಭಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಾಲಿಕೆ ಸದಸ್ಯೆ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಇದ್ದಾರೆ   

ಮೈಸೂರು: ಜಿಲ್ಲೆಯಲ್ಲಿ 5,296 ಆಶ್ರಯ ಮನೆಗಳ ಕಾಮಗಾರಿ ಸ್ಥಗಿತಗೊಂಡಿದ್ದು, ಕಾಮಗಾರಿಯನ್ನು ಪುನರ್‌ ಆರಂಭಿಸಬೇಕು ಎಂದು ಕಾಂಗ್ರೆಸ್ ಮುಖಂಡ ಎಂ.ಕೆ.ಸೋಮಶೇಖರ್ ಒತ್ತಾಯಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ತಮ್ಮ ಬೆಂಬಲಿಗರೊಂದಿಗೆ ಸೇರಿದ ಅವರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ಈ ಯೋಜನೆಗೆ ಶಾಸಕ ರಾಮದಾಸ್ ಅವರು ರಾಜಕೀಯ ಸೇಡಿನಿಂದಾಗಿ ತಡೆಯೊಡ್ಡಿದ್ದಾರೆ’ ಎಂದು ಅವರು ಇದೇ ವೇಳೆ ಆರೋಪಿಸಿದರು.

ADVERTISEMENT

ನಾನು ಶಾಸಕನಾಗಿದ್ದ ಅವಧಿಯಲ್ಲಿ ಬಡವರಿಗಾಗಿ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಮನೆಗಳನ್ನು ನಿರ್ಮಿಸಿಕೊಡಲು ಮಳಲವಾಡಿಯಲ್ಲಿ 3.5 ಎಕರೆ ಹಾಗೂ ವಿಶ್ವೇಶ್ವರನಗರದಲ್ಲಿ 1.5 ಎಕರೆ ಭೂಮಿಯನ್ನು ಮೀಸಲಿರಿಸಲಾಗಿತ್ತು. ಲಲಿತಾದ್ರಿಪುರದಲ್ಲಿ 1,140, ಗುರೂರಿನಲ್ಲಿ 1,644 ಮನೆಗಳ ಕಾಮಗಾರಿ ಆರಂಭವೂ ಆಗಿತ್ತು. ಆದರೆ, ಈಗ ಇದು ನಿಂತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮನೆ ನಿರ್ಮಿಸಲೆಂದು ಸರ್ಕಾರದಿಂದ ಬಿಡುಗಡೆಯಾಗಿದ್ದ ₹ 18 ಕೋಟಿ ಅನುದಾನ ಒಂದೂವರೆ ವರ್ಷಗಳಿಂದಲೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ವ್ಯರ್ಥವಾಗಿ ಬಿದ್ದಿದೆ. ಇದೀಗ ಎಲ್ಲ ಯೋಜನೆಗಳೂ ಸ್ಥಗಿತಗೊಂಡಿವೆ ಎಂದು ಕಿಡಿಕಾರಿದರು.

ಯಾರೇ ಆಗಲಿ ರಾಜಕೀಯ ಸೇಡಿನಿಂದ ಈ ರೀತಿ ಮಾಡಬಾರದು. ಇದರಿಂದ ಮನೆಗಾಗಿ ಕಾದು ಕುಳಿತಿದ್ದ ಬಡಜನರಿಗೆ ತೊಂದರೆಯಾಗಿದೆ. ಅಧಿಕಾರಿಗಳು ಸಹ ರಾಮದಾಸ್ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕೂಡಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದರತ್ತ ಗಮನ ಹರಿಸಬೇಕು. ಕಾಮಗಾರಿ ನಡೆಸಲು ಅವಕಾಶ ಮಾಡಿಕೊಡಬೇಕು. ಬಡಜನರಿಗೆ ಸೂರು ಕಲ್ಪಿಸಿಕೊಡಬೇಕು ಎಂದು ಅವರು ಒತ್ತಾಯಿಸಿದರು.

ಕಾಂಗ್ರೆಸ್‌ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್, ಪಕ್ಷದ ನಗರ ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಪಾಲಿಕೆ ಸದಸ್ಯೆ ಪುಷ್ಪಲತಾ ಜಗನ್ನಾಥ್, ಮುಖಂಡ ಎಚ್.ಎ.ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.