ADVERTISEMENT

ಮೈಸೂರು | ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಮೇ 2020, 16:34 IST
Last Updated 27 ಮೇ 2020, 16:34 IST
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಬುಧವಾರ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಬುಧವಾರ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು   

ಮೈಸೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಕಾರ್ಯಕರ್ತರು ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

‘ಲಾಕ್‌ಡೌನ್‌’ನಿಂದ ಸಂಕಷ್ಟಕ್ಕೆ ಈಡಾಗಿರುವ ರೈತರು, ಕೃಷಿ ಕೂಲಿಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

‘ಎಪಿಎಂಸಿ ಕಾಯ್ದೆ ಹಾಗೂ ಕೃಷಿ ಭೂಮಿ ಗುತ್ತಿಗೆ ಕಾಯ್ದೆ ತಿದ್ದುಪಡಿಯನ್ನು ಮೇ 31ರೊಳಗೆ ಮಾಡುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಿದ್ದು ಸರಿಯಲ್ಲ. ತಿದ್ದುಪಡಿ ಮಾಡುವುದಿಲ್ಲ ಎಂದು ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಸೇರಿದಂತೆ ಕೆಲ ರಾಜ್ಯಗಳು ನೇರವಾಗಿ ಹೇಳಿವೆ. ಆದರೆ, ನಮ್ಮ ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಗೋದಾಮುಗಳಲ್ಲಿ ಇರುವ ಆಹಾರ ಧಾನ್ಯಗಳನ್ನು ಬಿಪಿಎಲ್‌ ಮತ್ತು ಎಪಿಎಲ್ ಎಂಬ ತಾರತಮ್ಯ ಮಾಡದೇ ಕನಿಷ್ಠ ಒಂದು ವರ್ಷ ಮಾಸಿಕ ಪ್ರತಿ ಕುಟುಂಬದ ತಲಾ ವ್ಯಕ್ತಿಗೆ 15 ಕೆ.ಜಿ ಪಡಿತರ ವಿತರಿಸಬೇಕು, ಕೇರಳ ಮಾದರಿಯಲ್ಲಿ ಅಕ್ಕಿ ಜತೆ ಬೇಳೆ, ಎಣ್ಣೆ, ಸಕ್ಕರೆ, ಉಪ್ಪು ನೀಡಬೇಕು ಎಂದು ಆಗ್ರಹಿಸಿದರು.

ರೈತರು, ಕೃಷಿ ಕೂಲಿಕಾರರು, ಕಸುಬುದಾರರು ಮತ್ತು ಸ್ತ್ರೀ ಶಕ್ತಿ ಗುಂಪುಗಳ ಸಾಲ ಮನ್ನಾ ಮಾಡಬೇಕು. ಕೃಷಿ ಸಾಲಗಳ ವಸೂಲಾತಿ ನಿಲ್ಲಿಸಿ, ಹೊಸ ಸಾಲ ನೀಡಬೇಕು ಎಂದು ಮನವಿ ಮಾಡಿದರು.

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಸುಬುದಾರರ ಕುಟುಂಬಗಳಿಗೆ ಲಾಕ್‌ಡೌನ್‌ ಅವಧಿಯ ಪ್ರತಿ ತಿಂಗಳು ₹ 10 ಸಾವಿರ ನೀಡಬೇಕು, ಪಿಎಂ ಕಿಸಾನ್ ಯೋಜನೆಯ ಮೊತ್ತವನ್ನು ₹ 18 ಸಾವಿರಕ್ಕೆ ಏರಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೆ.ಬಸವರಾಜು, ಮುಖಂಡರಾದ ಎಂ.ಎಸ್.ಅಶ್ವಥನಾರಾಯಣ ರಾಜೇಅರಸ್, ವಿಭಾಗೀಯ ಕಾರ್ಯದರ್ಶಿ ಸರಗೂರ ನಟರಾಜ್, ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಮೈಸೂರು ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಮರಂಕಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.