ADVERTISEMENT

ಉನ್ನಾವ್‍ ಅತ್ಯಾಚಾರ ಪ್ರಕರಣ: ಆರೋಪಿ ಶಾಸಕನ ವಿರುದ್ಧ ಪ್ರತಿಭಟನೆ

ಮಹಿಳಾ ಕಾಂಗ್ರೆಸ್ ವತಿಯಿಂದ ಆಕ್ರೋಶ, ಮಹಿಳೆಯರ ಸುರಕ್ಷತೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 31 ಜುಲೈ 2019, 18:41 IST
Last Updated 31 ಜುಲೈ 2019, 18:41 IST
ದೇಶದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡಬೇಕು ಎಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್‌ ಮಹಿಳಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಬುಧವಾರ ಮೈಸೂರಿನ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಇದ್ದಾರೆ
ದೇಶದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡಬೇಕು ಎಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್‌ ಮಹಿಳಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಬುಧವಾರ ಮೈಸೂರಿನ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಇದ್ದಾರೆ   

ಮೈಸೂರು: ಉನ್ನಾವ್‍ದಲ್ಲಿ ಯುವತಿಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಹೊತ್ತ ಬಿಜೆಪಿ ಶಾಸಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದರು.

ಇಲ್ಲಿನ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಸೇರಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಉನ್ನಾವದ ಅತ್ಯಾಚಾರ ಪ್ರಕರಣ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದೆ. ಪ್ರಕರಣದ ಪ್ರಮುಖ ಸಾಕ್ಷಿದಾರರನ್ನು ಈಗಾಗಲೇ ಅಪಘಾತದಲ್ಲಿ ಸಾಯಿಸಲಾಗಿದೆ. ಸಂತ್ರಸ್ಥ ಯುವತಿಯ ವಕೀಲರನ್ನು ಕೊಲ್ಲುವ ಯತ್ನ ಮಾಡಲಾಗಿದೆ. ಇಷ್ಟಾದರೂ ಶಾಸಕನನ್ನು ರಕ್ಷಿಸುವ ಕಾರ್ಯವನ್ನು ಒಳಗೊಳಗೆ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

ADVERTISEMENT

ಇತ್ತೀಚೆಗೆ ದೇಶದಲ್ಲಿ ಮಹಿಳೆಗೆ ಭದ್ರತೆಯೇ ಇಲ್ಲದಂತಾಗಿದೆ. ಮಹಿಳಾ ದೌರ್ಜನ್ಯಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇನ್ನಾದರೂ ಸರ್ಕಾರ ಮಹಿಳೆಯ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಮುಖಂಡರಾದ ಪುಷ್ಪಲತಾ ಚಿಕ್ಕಣ್ಣ, ಪಾಲಿಕೆ ಸದಸ್ಯೆ ಶಾಂತಕುಮಾರಿ, ಮುಖಂಡ ಸುನಿಲ್ ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.