ಮೈಸೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗಾಗಿ ಆಗ್ರಹಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ಎಸ್‌ಸಿ, ಎಸ್‌ಟಿ ಉಪಯೋಜನಾ ಕಾಯ್ದೆಯಂತೆ ಪ್ರಸ್ತುತ ಸಾಲಿನ ಬಜೆಟ್‌ನಲ್ಲಿ ಮೀಸಲಿಟ್ಟ ₹ 29 ಸಾವಿರ ಕೋಟಿ ಹಣವನ್ನು ಇಲಾಖಾವಾರು ಬಿಡುಗಡೆ ಮಾಡಬೇಕು. ಈ ಹಣವನ್ನು ಬೇರೆ ಉದ್ದೇಶಕ್ಕೆ ಬಳಕೆ ಮಾಡದಂತೆ ನಿರ್ಬಂಧ ವಿಧಿಸಬೇಕು ಮತ್ತು ದುರುಪಯೋಗವಾದರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪರಿಶಿಷ್ಟ ಜಾತಿ ಮೀಸಲು ಪಟ್ಟಿಯಲ್ಲಿ ಇರುವ 101 ಜಾತಿಗಳ ಜನಸಂಖ್ಯಾವಾರು ಮೀಸಲು ಪ್ರಮಾಣ ಹೆಚ್ಚಿಸಿ ಎಲ್ಲಾ ಜಾತಿಗಳಿಗೂ ಸಮಾನ ಅವಕಾಶ ದಕ್ಕುವಂತೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ರಾಜ್ಯದ ಎಲ್ಲ ಜಾತಿಯ ಭೂರಹಿತ ಕೂಲಿ ಕಾರ್ಮಿಕರಿಗೆ ಭೂಮಿ ಮತ್ತು ನಿವೇಶನ ಹಂಚಿಕೆ ಮಾಡಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಾಲಸೌಲಭ್ಯ ನೀಡಲು ವಿಧಾನಸಭಾ ಸದಸ್ಯರ ಅಧ್ಯಕ್ಷತೆಯಲ್ಲಿ ಫಲಾನುಭುಗಳನ್ನು ಆಯ್ಕೆ ಮಾಡುವ ನಿಯಮವನ್ನು ಕೂಡಲೇ ರದ್ದುಪಡಿಸಬೇಕು ಎಂದು ಅವರು ಮನವಿ ಮಾಡಿದರು.
ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಸಲೆ ರಾಜಶೇಖರಮೂರ್ತಿ, ಮುಖಂಡರಾದ ಗಂಗಾಧರ, ಹರೀಶ, ಎಚ್.ಆರೀಫ್, ಪುಟ್ಟಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.