ಮೈಸೂರು: ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಇಲ್ಲಿನ ಮಹಾತ್ಮ ಗಾಂಧಿ ಚೌಕದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಕೊರೊನಾ ಸಂದರ್ಭದಲ್ಲಿ ಜನರು ಕೆಲಸ ಇಲ್ಲದೇ ಪರಿತಪಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬೆಲೆ ಏರಿಕೆ ಮಾಡುತ್ತಿರುವುದು ಸರಿಯಲ್ಲ ಎಂದು ಕಾರ್ಯಕರ್ತರು ಖಂಡಿಸಿದರು.
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಎಲ್ಲ ವಸ್ತುಗಳ ಬೆಲೆಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಕಂಪನಿಗಳು, ಕಾರ್ಖಾನೆಗಳು ಸೇರಿದಂತೆ ಬಹುತೇಕ ಖಾಸಗಿ ವಲಯದಲ್ಲಿ ಸಂಬಳವನ್ನು ಕಡಿಮೆ ಮಾಡಲಾಗುತ್ತಿದೆ. ಉದ್ಯೋಗ ಕಡಿತದಂತಹ ಕ್ರಮಗಳನ್ನು ನಿರ್ದಾಕ್ಷೀಣ್ಯವಾಗಿ ಜಾರಿಗೊಳಿಸಲಾಗುತ್ತಿದೆ. ಇದರಿಂದ ಬಡವರು ಹೈರಾಣಾಗಿದ್ದಾರೆ ಎಂದು ಅವರು ಕಿಡಿಕಾರಿದರು.
ಈ ವೇಳೆ ಪ್ರತಿಕ್ರಿಯಿಸಿದ ಶಾಸಕ ಸಾ.ರಾ.ಮಹೇಶ್, ‘ಇದೊಂದು ಸಾಂಕೇತಿಕ ಪ್ರತಿಭಟನೆಯಾಗಿದೆ. ಬೆಲೆ ಏರಿಕೆ ನಿಯಂತ್ರಣ ಬಾರದಿದ್ದರೆ, ಏರಿಸಿರುವ ಬೆಲೆಗಳನ್ನು ಇಳಿಸದೇ ಹೋದರೆ ಮುಂದೆ ಇನ್ನಷ್ಟು ಉಗ್ರ ಸ್ವರೂಪದ ಪ್ರತಿಭಟನೆ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಪಕ್ಷದ ನಗರ ಘಟಕದ ಅಧ್ಯಕ್ಷ ಚಲುವೇಗೌಡ, ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹಸ್ವಾಮಿ, ಪಾಲಿಕೆ ಸದಸ್ಯರು, ಜಿಲ್ಲಾ ಪಂಚಾಯಿತಿ ಸದಸ್ಯರು ಪ್ರತಿಭಟನೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.