
ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಸರ್ಕಾರ ಮಂಜೂರು ಮಾಡಿದ ಜಮೀನು ರಕ್ಷಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ತಿದ್ದುಪಡಿ ಕಾಯ್ದೆಯ (ಪಿಟಿಸಿಎಲ್) ಗೊಂದಲದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು’ ಎಂದು ಒತ್ತಾಯಿಸಲಾಗಿದೆ.
ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
2023ರಲ್ಲಿ ತಿದ್ದುಪಡಿ ಮಾಡಿದ ಬಳಿಕ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ನ್ಯಾಯಾಲಯ, ಹೈಕೋರ್ಟ್, ಸುಪ್ರೀಂ ಕೋರ್ಟ್‌ನಲ್ಲಿ ಪಿಟಿಸಿಎಲ್ ಕಾಯ್ದೆ ವಿರುದ್ದವಾಗಿ ಆಗುತ್ತಿರುವ ಆದೇಶಗಳನ್ನು ತಡೆಯಲು ಕಠಿಣ ಕಾನೂನು ರೂಪಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಪಿಟಿಸಿಎಲ್ ಕಾಯ್ದೆ ಕಲಂ 3(1)ಬಿ ಅಡಿ ಬರುವ ಜಮೀನುಗಳು ಸರ್ಕಾರದಿಂದ ಮಂಜೂರಾಗಿದ್ದರೂ, ಕಾಯ್ದೆ ವ್ಯಾಪ್ತಿಯಲ್ಲಿ ಬರುವುದಿಲ್ಲವೆಂದು ಉದ್ದೇಶಪೂರ್ವಕವಾಗಿ ವಜಾ ಮಾಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಮಂಜೂರಾದ ಎಲ್ಲ ಜಮೀನುಗಳ ಬಗ್ಗೆ ಸ್ಪಷ್ಟಪಡಿಸಿ ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದರು.
ಎಲ್ಲ ನ್ಯಾಯಾಲಯಗಳಲ್ಲಿ ಶೇ 90ರಷ್ಟು ಸರ್ಕಾರಿ ವಕೀಲರು ಸರ್ಕಾರದ ಕಾಯ್ದೆ/ ಆದೇಶಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಸರಿಯಾಗಿ ವಾದ ಮಂಡಿಸುತ್ತಿಲ್ಲ. ಇದರಿಂದ ಹಿನ್ನಡೆಯಾಗುತ್ತಿದೆ. ಅವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಬಿ.ಎಂ.ವೆಂಕಟೇಶ್, ಜಗದೀಶ್, ಚಂದ್ರಣ್ಣ, ಈಶ್ವರಪ್ಪ, ಚನ್ನಕೇಶವ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.