
ಬೆಟ್ಟದಪುರ: ಇಲ್ಲಿನ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ ಪೋಷಕ–ಶಿಕ್ಷಕರ ಮಹಾಸಭೆಯನ್ನು ಶುಕ್ರವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಓಸಾಟ್ ಸಂಸ್ಥೆಯ ಉಪಾಧ್ಯಕ್ಷ ಸುಧೀರ್ ಹುಲ್ಲೇಮನೆ ಮಾತನಾಡಿ, ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಿಕೊಂಡು ಜೀವನದಲ್ಲಿ ಉನ್ನತ ಸ್ಥಾನವನ್ನು ಪಡೆಯಲು ಸದಾ ಪ್ರಯತ್ನಿಸಬೇಕು. ಅದರಲ್ಲಿಯೂ ವಿದ್ಯಾರ್ಥಿನಿಯರು ವಿದ್ಯಾಭ್ಯಾಸವನ್ನು ಅರ್ಧದಲ್ಲೇ ಬಿಡಬಾರದು. ಪೋಷಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಅವರು ಮಕ್ಕಳ ವಿಜ್ಞಾನ ವಸ್ತುಪ್ರದರ್ಶನ ಉದ್ಘಾಟಿಸಿ ಮಕ್ಕಳಿಗೆ ಉತ್ತೇಜಿಸಿದರು.
ಪಿಡಿಒ ವಿಶ್ವನಾಥ್ ಮಾತನಾಡಿ ಶಾಲೆಯ ಸಮಗ್ರ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ವತಿಯಿಂದ ಎಲ್ಲ ಸಹಕಾರ ನೀಡಲಾಗುವುದು. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶೈಕ್ಷಣಿಕ ಅನುಕೂಲಗಳನ್ನು ಒದಗಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ ಎಂದರು.
ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ನಾಲ್ಕು ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಿದರು. ಓಸಾಟ್ ಸಂಸ್ಥೆಯ ನಿರ್ದೇಶಕರಾದ ಶ್ರುತಿ, ಎಸ್‌ಡಿಎಂಸಿ ಅಧ್ಯಕ್ಷ ರಾಜೇಗೌಡ, ಸದಸ್ಯ ರವಿ, ಹರೀಶ್, ಮುಖ್ಯ ಶಿಕ್ಷಕ ನಾಗಶೆಟ್ಟಿ, ಶಿಕ್ಷಕರಾದ ರವಿ, ಚೆಲುವರಾಜ್, ಮಾದನಾಯಕ್, ಇಂದ್ರಮ್ಮ, ಪುಷ್ಪಲತಾ,ಸ್ವಾಮಿ, ದೇವರಾಜ್, ರಜನಿಕಾಂತ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.