ಮೈಸೂರು: ‘ಇಲ್ಲಿನ ಮುಡಾ ಹಗರಣದಲ್ಲಿ ಭಾಗಿಯಾದ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಇಲ್ಲಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಲೋಕಾಯುಕ್ತಕ್ಕೆ ಶನಿವಾರ ದೂರು ಸಲ್ಲಿಸಿದ್ದಾರೆ.
‘ಶೇ 50:50 ಅನುಪಾತದಲ್ಲಿ ಐದು ಲಕ್ಷ ಚದರ ಅಡಿಗೂ ಅಧಿಕ ನಿವೇಶನಗಳನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಪ್ರಾಧಿಕಾರದ ಈ ಹಿಂದಿನ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ವಿರುದ್ಧ ಸೂಕ್ತ ಕ್ರಮಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದರೂ ಕ್ರಮ ತೆಗೆದುಕೊಂಡಿಲ್ಲ’ ಎಂದು ಆರೋಪಿಸಿದ್ದಾರೆ.
‘ಮುಡಾ ಅಕ್ರಮದಿಂದಾಗಿ ಸರ್ಕಾರದ ಬೊಕ್ಕಸಕ್ಕೆ ₹5 ಸಾವಿರ ಕೋಟಿ ನಷ್ಟವಾಗಿರುವ ಬಗ್ಗೆ ಆರೋಪವಿದೆ. ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಹಿಂದಿನ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಹಾಗೂ ಜಿ.ಟಿ.ದಿನೇಶ್ ಕುಮಾರ್ ವಿರುದ್ಧ ತನಿಖೆ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಬಂಧಿಸಿ, ಸರ್ಕಾರಕ್ಕೆ ಆದ ನಷ್ಟವನ್ನು ಅವರಿಂದಲೇ ಭರಿಸುವಂತೆ ಆದೇಶಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.