ADVERTISEMENT

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಕೆ: ಎಚ್‌.ಸಿ. ಮಹದೇವಪ್ಪ

​ಪ್ರಜಾವಾಣಿ ವಾರ್ತೆ
Published 29 ಜೂನ್ 2025, 19:27 IST
Last Updated 29 ಜೂನ್ 2025, 19:27 IST
<div class="paragraphs"><p>ಎಚ್‌.ಸಿ. ಮಹದೇವಪ್ಪ&nbsp;</p></div>

ಎಚ್‌.ಸಿ. ಮಹದೇವಪ್ಪ 

   

ಮೈಸೂರು: ‘ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ನಮ್ಮ ಸರ್ಕಾರ ಗಟ್ಟಿಯಾಗಿದ್ದು, ಅಧಿಕಾರದ ಅವಧಿ ಪೂರೈಸಲಿದೆ’ ಎಂದು ಸಮಾಜಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ಆನೆ ಹೋಗುವಾಗ ಅದೇನೋ ಬೀಳುತ್ತದೆಂದು ಕಾಯುವ ಸ್ಥಿತಿಯಲ್ಲಿ ಬಿಜೆಪಿ ಇದೆ. ಅದು ಬೀಳುವುದಿಲ್ಲ, ಇವರು ಕಾಯುವುದು ಬಿಡುವುದಿಲ್ಲ’ ಎಂದು ಟೀಕಿಸಿದರು.

ADVERTISEMENT

‘ಈ ಬಾರಿಯ ದಸರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿರುವುದಿಲ್ಲ’ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅಶೋಕ, ಕಾಂಗ್ರೆಸ್ ಹೈಕಮಾಂಡ್ ಅಲ್ಲ. ಅವರು ವಿರೋಧ ಪಕ್ಷದ ನಾಯಕರಷ್ಟೆ. ಅವರಿಗೂ– ಕಾಂಗ್ರೆಸ್‌ಗೂ ಏನು ಸಂಬಂಧ‌? ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ನಮ್ಮಲ್ಲಿ ಯಾವ ಒಪ್ಪಂದ ಆಗಿದೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ಅಂಥದ್ದು ನಡೆದೇ ಇಲ್ಲ. ಸಿದ್ದರಾಮಯ್ಯ ಅವರೇ ದಸರಾ ನಡೆಸಿಕೊಡಲಿದ್ದಾರೆ’ ಎಂದರು.

‘ಸೆಪ್ಟೆಂಬರ್ ನಂತರ ಕ್ರಾಂತಿ ಆಗಲಿದೆ’ ಎಂಬ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕ್ರಾಂತಿ ಆಗುತ್ತದೆಂದು ಯಾವ ಅರ್ಥದಲ್ಲಿ ಹೇಳಿದ್ದಾರೆಯೋ ಗೊತ್ತಿಲ್ಲ. ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಹೇಳಿಕೆ ನೀಡಿರಬಹುದು. ಅದಕ್ಕೂ–ನಮಗೂ ಸಂಬಂಧವಿಲ್ಲ’ ಎಂದು ಹೇಳಿದರು.

‘ರಾಜಕೀಯವಾಗಿ ಕ್ರಾಂತಿಗಳು ಯಾವಾಗಲೂ ನಡೆಯುತ್ತಲೇ ಇರುತ್ತವೆ. ಸಂಕ್ರಾಂತಿಯನ್ನು ಜೋರಾಗಿಯೇ ಮಾಡೋಣ ಬಿಡಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.