ಮೈಸೂರಿನ ಕಲಾಮಂದಿರದ ಆವರಣದಲ್ಲಿ ಇರಿಸಲಾಗಿದ್ದ ಪ್ರೊ.ಎಸ್.ಎಲ್.ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಗೌರವ ಸಲ್ಲಿಸಿದರು. ಬಿಜೆಪಿ ಮುಖಂಡ ಪ್ರತಾಪಸಿಂಹ, ಪತ್ರಕರ್ತ ವಿಶ್ವೇಶ್ವರ ಭಟ್, ಭೈರಪ್ಪ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷ ಜಿ.ಎಲ್.ಶೇಖರ್ ಪಾಲ್ಗೊಂಡಿದ್ದರು
ಮೈಸೂರು: ಇಲ್ಲಿನ ಕಲಾಮಂದಿರದ ಕಿಂದರಿಜೋಗಿ ಆವರಣದಲ್ಲಿ ಗುರುವಾರ ಮಧ್ಯಾಹ್ನ ಕಾದಂಬರಿಕಾರ ಪ್ರೊ.ಎಸ್.ಎಲ್.ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ನೂರಾರು ಮಂದಿ ಪಡೆದರು. ನೆಚ್ಚಿನ ಲೇಖಕನನ್ನು ನೋಡಿ ಭಾವುಕರಾದರು.
ಬೆಂಗಳೂರಿನಿಂದ ಮಧ್ಯಾಹ್ನ 3.40ಕ್ಕೆ ಪಾರ್ಥಿವ ಶರೀರ ತರಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ದರ್ಶನ ಪಡೆದು ಪುಷ್ಪಗುಚ್ಚವಿರಿಸಿ ಗೌರವ ಸಲ್ಲಿಸಿದರು. ಭೈರಪ್ಪ ಅವರ ಪುತ್ರರಾದ ಉದಯಶಂಕರ್ ಮತ್ತು ರವಿಶಂಕರ್ ಸೇರಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ವಿದ್ವಾಂಸ ಟಿ.ವಿ.ವೆಂಕಟಾಚಲ ಶಾಸ್ತ್ರಿ, ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಅರಸ್, ಆದಿಚುಂಚನಗಿರಿ ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸದಸ್ಯರಾದ ಅಡಗೂರು ಎಚ್.ವಿಶ್ವನಾಥ್, ಕೆ.ಶಿವಕುಮಾರ್, ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್‌ಗೌಡ, ಬಿಜೆಪಿ ಮುಖಂಡ ಪ್ರತಾಪಸಿಂಹ ಅಂತಿಮ ನಮನ ಸಲ್ಲಿಸಿದರು. ಸಂಜೆ 6ಕ್ಕೆ ಜೆಎಸ್‌ಎಸ್ ಆಸ್ಪತ್ರೆಯ ಶೈತ್ಯಾಗಾರಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಯಿತು.
‘ಶುಕ್ರವಾರ ಬೆಳಿಗ್ಗೆ 8ಕ್ಕೆ ಕುವೆಂಪುನಗರದ ಅವರ ನಿವಾಸದಲ್ಲಿ ಕುಟುಂಬದವರು ಧಾರ್ಮಿಕ ಕಾರ್ಯಗಳನ್ನು ನಡೆಸಲಿದ್ದು, ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬೆಳಿಗ್ಗೆ 11ಕ್ಕೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ’ ಎಂದು ಬಿಜೆಪಿ ಮುಖಂಡ ಪ್ರತಾಪ ಸಿಂಹ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.