ಮೈಸೂರು: ಇಲ್ಲಿನ ಕಲಾಮಂದಿರದ ಕಿಂದರಿಜೋಗಿ ಆವರಣದಲ್ಲಿ ಪ್ರೊ.ಎಸ್.ಎಲ್.ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಿಂದ ಮಧ್ಯಾಹ್ನ 3.30ಕ್ಕೆ ಪಾರ್ಥಿವ ಶರೀರ ತರಲಾಗುತ್ತಿದ್ದು, ಸಾರ್ವಜನಿಕರ ಅಂತಿಮ ದರ್ಶನದ ನಂತರ ಸಂಜೆ 5.30ರ ವೇಳೆಗೆ ಜೆಎಸ್ಎಸ್ ಆಸ್ಪತ್ರೆಯ ಶೈತ್ಯಾಗಾರದಲ್ಲಿ ಇರಿಸಲಾಗುತ್ತದೆ.
ಕುವೆಂಪುನಗರದ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ 8.30ಕ್ಕೆ ಪಾರ್ಥಿವ ಶರೀರ ತೆಗೆದುಕೊಂಡು ಹೋಗಲಾಗುತ್ತದೆ. ಕುಟುಂಬದವರ ಧಾರ್ಮಿಕ ವಿಧಿವಿಧಾನ ಸಲ್ಲಿಸಿದ ನಂತರ ಅಂತ್ಯಸಂಸ್ಕಾರವು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬೆಳಿಗ್ಗೆ 11ಕ್ಕೆ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ದರ್ಶನ ಪಡೆಯುವರು.
ಜಯಲಕ್ಷ್ಮಿಪುರಂ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಕುಮಾರ್ ನೇತೃತ್ವದಲ್ಲಿ 80 ಪೊಲೀಸ್ ಸಿಬ್ಬಂದಿ ಭದ್ರತೆ ಒದಗಿಸಿದ್ದಾರೆ.
ಮೈಸೂರಿನ ಸಾಹಿತ್ಯಾಭಿಮಾನಿಗಳು ಈಗಾಗಲೇ ಇಲ್ಲಿ ಬಂದು ಸೇರಿದ್ದು, ದರ್ಶನಕ್ಕೆ ಕಾಯುತ್ತಿದ್ದಾರೆ. ಶಾಸಕ ಟಿ.ಎಸ್.ಶ್ರೀವತ್ಸ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ ಮಧ್ಯಾಹ್ನ ಸಿದ್ಧತೆ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.