ADVERTISEMENT

‘ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಿ’: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 6:13 IST
Last Updated 20 ಆಗಸ್ಟ್ 2025, 6:13 IST
<div class="paragraphs"><p>ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಮಂಗಳವಾರ ಪ್ರತಿಭಟಿಸಿದರು</p></div>

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಮಂಗಳವಾರ ಪ್ರತಿಭಟಿಸಿದರು

   

ಪ್ರಜಾವಾಣಿ ಚಿತ್ರ

ಮೈಸೂರು: ಕಬ್ಬು ಬೆಳೆಗಾರ ರೈತರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕುರುಬೂರು ಶಾಂತಕುಮಾರ್ ನೇತೃತ್ವದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ರೇಖಾ ಅವರಿಗೆ ಒತ್ತಾಯ ಪತ್ರ ನೀಡಿದರು.

ADVERTISEMENT

‘ಪ್ರಸಕ್ತ ಸಾಲಿಗೆ ಕೇಂದ್ರ ಸರ್ಕಾರ ಟನ್ ಕಬ್ಬಿಗೆ ₹ 3,550 ನಿಗದಿ ಮಾಡಿದೆ. ಎಫ್‌ಆರ್‌ಪಿ ದರಕ್ಕೆ ಹೆಚ್ಚುವರಿಯಾಗಿ ರಾಜ್ಯ ಸಲಹಾ ಬೆಲೆ ಎಸ್‌ಎಪಿ ದರ ಏರಿಕೆ ಮಾಡಿ ಟನ್‌ಗೆ ₹ 4,500 ನಿಗದಿ ಪಡಿಸಬೇಕು. ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ಕಳೆದ ವರ್ಷದ ಉಪ ಉತ್ಪನ್ನಗಳ ಲಾಭ ಹಂಚಿಕೆ ಮಾಡಿಸಿ ಕೊಡಿಸಬೇಕು’ ಎಂದು ಆಗ್ರಹಿಸಿದರು.

‘2023-2024 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಟನ್‌ಗೆ ₹150 ಬೆಲೆ ನಿಗದಿಪಡಿಸಿದ್ದು, ಕಾರ್ಖಾನೆಗಳು ಅದನ್ನು ಪಾವತಿಸಿಲ್ಲ. ಬಡ್ಡಿ ಸಮೇತ ಬಾಕಿ ಹಣ ಕೊಡಿಸಬೇಕು. ಕಬ್ಬಿನ ಎಫ್‌ಆರ್‌ಪಿ ದರವು ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು. ಬಣ್ಣಾರಿ ಸಕ್ಕರೆ ಕಾರ್ಖಾನೆಯಲ್ಲಿ ಸಕ್ಕರೆ ಇಳುವರಿ ಮೋಸ ತಪ್ಪಿಸಲು ಇಳುವರಿ ಮಿತಿ ಕನಿಷ್ಟ ಶೇ 9ಕ್ಕೆ ನಿಗದಿ ಆಗಬೇಕು. ತೂಕದ ಯಂತ್ರ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು.

‘ಕಡಕೋಳ ಗ್ರಾಮದಿಂದ ಹಾದು ಹೋಗುವ ಹೈಟೆನ್ಷನ್‌ ಮಾರ್ಗ ವಾಜಮಂಗಲ ಮೂಲಕ ಹಾದು ಹೋಗುತ್ತಿದ್ದು, ಇದರಿಂದ ರೈತರು ಜಮೀನು ಕಳೆದುಕೊಳ್ಳುತ್ತಿದ್ದಾರೆ. ಅಲ್ಲಿನ ರೈತರಿಗೆ ಪರ್ಯಾಯವಾಗಿ ಭೂಮಿ ನೀಡಬೇಕು ಅಥವಾ ಶಾಶ್ವತ ಪರಿಹಾರ ಕೊಡಿಸಬೇಕು’ ಎಂದರು.

ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ರೇಖಾ, ‘ರೈತರು ನೀಡಿದ್ದ ಒತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುತ್ತೇವೆ’ ಎಂದು ಭರವಸೆ ನೀಡಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾಧ್ಯಕ್ಷ ಪಿ. ಸೋಮಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಮಾರ್ಬಳ್ಳಿ ನೀಲಕಂಠಪ್ಪ, ಮೈಸೂರು ತಾಲ್ಲೂಕು ಅಧ್ಯಕ್ಷ ಲಕ್ಷ್ಮೀಪುರ ವೆಂಕಟೇಶ್, ನಂಜನಗೂಡು ತಾಲ್ಲೂಕು ಅಧ್ಯಕ್ಷ ದೇವನೂರು ವಿಜಯೇಂದ್ರ, ವರಕೋಡು ನಾಗೇಶ್, ಕೆಂಡಗಣಪ್ಪ, ಬನ್ನೂರು ಸೂರಿ, ವಾಜಮಂಗಲ ಮಹದೇವು, ಕಾಟೂರು ಮಹದೇವಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.