
ತಿ.ನರಸೀಪುರ: ‘ಭಾರತ –ಅಮೆರಿಕ ನಡುವಿನ ಮುಕ್ತ ವ್ಯಾಪಾರ ಒಪ್ಪಂದ’ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕರೆ ಕೊಟ್ಟಿರುವ ಹೋರಾಟದ ಹಿನ್ನೆಲೆಯಲ್ಲಿ ತಾಲ್ಲೂಕಿನ ಕಿರಗಸೂರು ಗ್ರಾಮ ಪಂಚಾಯಿತಿ ಮುಂಭಾಗ ರಾಜ್ಯ ಕಬ್ಬು ಬೆಳೆಗಾರ ಸಂಘದದಿಂದ ಭಾನುವಾರ ಪ್ರತಿಭಟನೆ ನಡೆಯಿತು.
ಸಂಘದ ಮೈಸೂರು, ಚಾಮರಾಜನಗರ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಕಿರಗಸೂರು ಶಂಕರ್ ಮಾತನಾಡಿ, ‘ಭಾರತ– ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದ ಮಾಡಿರುವುದು ಕೃಷಿ ವಲಯಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ’ ಎಂದರು.
‘ಒಪ್ಪಂದ ಹಿಂಪಡೆಯದಿದ್ದರೆ ಮುಂಬರುವ ದಿನಗಳಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ದೇಶದಾದ್ಯಂತ ಉಗ್ರ ಹೋರಾಟ ಮಾಡಲಿದೆ’ ಎಂದು ಎಚ್ಚರಿಕೆ ನೀಡಿದರು.
‘ಮಾರ್ಚ್ 19 ರಂದು ದೆಹಲಿಯಲ್ಲಿ ರೈತರ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ, ಅಮೆರಿಕ– ಭಾರತ ವ್ಯಾಪಾರ ಒಪ್ಪಂದದ ವಿಚಾರ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಚರ್ಚಿಸಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಲಾಗುವುದು’ ಎಂದರು.
ಪ್ರತಿಭಟನೆಯಲ್ಲಿ ಜಿಲ್ಲಾ ಜಂಟಿ ಕಾರ್ಯದರ್ಶಿ ಬೆನಕನಹಳ್ಳಿ ಬಿ.ಪಿ. ಪರಶಿವಮೂರ್ತಿ, ಕರುಹಟ್ಟಿ ಉಮೇಶ್, ರಾಜ್, ಕುಮಾರ್, ಕೆಇಬಿ ಯೋಗೇಶ್, ರಘು, ಕಿರಗಸೂರು ಸುರೇಶ್, ರಾಜೀವ್, ಮಹಾದೇವ, ಮಹೇಶ್, ಅಂಕಪ್ಪ, ಬಸವಲಿಂಗಪ್ಪ, ನಾಗ, ಮಾದೇಶ್, ಸ್ವಾಮಿ, ಚಂದ್ರು, ಶಂಕರ ರೈತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.