ತನ್ವೀರ್ ಸೇಠ್
ಮೈಸೂರು: ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಕ್ಯಾನ್ಸರ್ ರೋಗಿಗಳ ಆರೈಕೆಗಾಗಿ ‘ಡೇ ಕೆರ್ ಕಿಮೋಥೆರಪಿ’ ಕೇಂದ್ರ ಸ್ಥಾಪಿಸುವಂತೆ ಕೋರಿ ಶಾಸಕ ತನ್ವೀರ್ ಸೇಠ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದಿದ್ದಾರೆ.
‘ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಿದ್ವಾಯಿ ಸ್ಮಾರಕ ಆಂಕೋಲಜಿ ಸಂಸ್ಥೆಯ ವತಿಯಿಂದ ಡೇ ಕೇರ್ ಕಿಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು 2025–26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ನಗರದಲ್ಲಿ ಸುಮಾರು 300 ಹಾಸಿಗೆಗಳ ಸಾಮರ್ಥ್ಯದ ಎಲ್ಲ ವಿಧದ ಸರ್ಕಾರಿ ಆಸ್ಪತ್ರೆಗಳೂ ನಗರದ ಒಂದೇ ಭಾಗದಲ್ಲಿ ಕೇಂದ್ರೀಕೃತವಾಗಿವೆ. ಇದರಿಂದಾಗಿ ನರಸಿಂಹರಾಜ ಕ್ಷೇತ್ರದ ಜನರು ಸರ್ಕಾರದ ಆರೋಗ್ಯ ಸೇವೆಗಳಿಂದ ವಂಚಿತವಾಗಿದ್ದಾರೆ. ಆದ್ದರಿಂದ, ಸಾರ್ವಜನಿಕರ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಡೇ ಕೆರ್ ಕಿಮೋಥೆರಪಿ ಕೇಂದ್ರವನ್ನು ನರಸಿಂಹರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಾಪಿಸಬೇಕು’ ಎಂದು ಮನವಿ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ಈ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಪತ್ರದ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.