ADVERTISEMENT

17ರಂದು ನಂಜನಗೂಡು ಬಂದ್

ಸಭೆಯಲ್ಲಿ ದಲಿತ ಸಂಘಟನೆಗಳ ಒಕ್ಕೂಟ, ರೈತ ಸಂಘದ ಮುಖಂಡರ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2022, 5:06 IST
Last Updated 14 ಫೆಬ್ರುವರಿ 2022, 5:06 IST
ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ತಾಲ್ಲೂಕಿನ ಪ್ರಗತಿಪರ ಸಂಘಟನೆಗಳ ಮುಖಂಡರು ಶನಿವಾರ ಸಭೆ ನಡೆಸಿದರು
ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ತಾಲ್ಲೂಕಿನ ಪ್ರಗತಿಪರ ಸಂಘಟನೆಗಳ ಮುಖಂಡರು ಶನಿವಾರ ಸಭೆ ನಡೆಸಿದರು   

ನಂಜನಗೂಡು: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿ ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟ, ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳು ಫೆ.17ರಂದು ನಂಜನಗೂಡು ಬಂದ್‌ ಮಾಡಲು ನಿರ್ಧರಿಸಿವೆ.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸಭೆಯಲ್ಲಿ ತಾಲ್ಲೂಕಿನ ಪ್ರಗತಿಪರ ಸಂಘಟನೆಗಳ ಮುಖಂಡರು ಈ ನಿರ್ಧಾರ ಕೈಗೊಂಡರು.

ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಂಕರಪುರ ಸುರೇಶ್ ಮಾತನಾಡಿ, ‘ಗಣರಾಜ್ಯೋತ್ಸವ ದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ತೆಗೆಸಿ ಧ್ವಜಾರೋಹಣ ನೆರವೇರಿಸಿದ್ದ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರ ವಿರುದ್ಧ ಇಡೀ ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆದಿವೆ. ಅವರ ವಜಾಕ್ಕೆ ಆಗ್ರಹಿಸಿದ್ದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರವು ಜಾಣ ಕಿವುಡು ಪ್ರದರ್ಶಿಸುತ್ತಿದೆ. ನ್ಯಾಯಾಧೀಶರನ್ನು ವಜಾ ಮಾಡಿ, ಶಿಕ್ಷೆಗೆ ಗುರಿಪಡಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ‘ಸಂವಿಧಾನ ದಡಿ ಕರ್ತವ್ಯ ನಿರ್ವಹಿಸಬೇಕಾದ ನ್ಯಾಯಾಧೀಶರು, ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದಾರೆ. ತಾಲ್ಲೂಕಿನ ಪಗತಿಪರ ಸಂಘಟನೆಗಳು ಒಟ್ಟಾಗಿ ಶಾಂತಿಯುತವಾಗಿ ನಂಜನಗೂಡು ಬಂದ್ ನಡೆಸಲು ನಿರ್ಧರಿಸಿದ್ದೇವೆ’ ಎಂದು ಹೇಳಿದರು.

ಸಭೆಯಲ್ಲಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಸತೀಶ್ ರಾವ್, ಬಂಗಾರು ಸ್ವಾಮಿ, ಬೊಕ್ಕಳ್ಳಿ ನಂಜುಂಡಸ್ವಾಮಿ, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಾಡ್ಯ ರವಿ, ದಲಿತ ಸಂಘರ್ಷ ಸಮಿತಿಯ ಚುಂಚನಹಳ್ಳಿ ಮಲ್ಲೇಶ್, ಮಲ್ಲಹಳ್ಳಿ ನಾರಾಯಣ, ಕಾರ್ಯ ಬಸವಣ್ಣ, ಶಂಕರಪುರ ಮಂಜು, ನಗರ್ಲೆ ವಿಜಯ್ ಕುಮಾರ್, ಅಬ್ದುಲ್ ಖಾದರ್, ಪ್ರತಿಧ್ವನಿ ತ್ರಿನೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.