ADVERTISEMENT

ಮೈಸೂರಿನ ಕೆ.ಆರ್.ಆಸ್ಪತ್ರೆಯ ಟ್ರೈನಿ ಸ್ಟಾಫ್ ನರ್ಸ್‌ಗಳ ಪ್ರತಿಭಟನೆ ಮುಂದುವರಿಕೆ

ಇಂದಿನಿಂದ ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸಲು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 7 ಜುಲೈ 2020, 14:18 IST
Last Updated 7 ಜುಲೈ 2020, 14:18 IST
ಮೈಸೂರಿನ ಕೆ.ಆರ್.ಆಸ್ಪತ್ರೆಯ ಪ್ರವೇಶದ್ವಾರದಲ್ಲಿ ಮಂಗಳವಾರ ಆಸ್ಪತ್ರೆಯ ಟ್ರೈನಿ ಸ್ಟಾಫ್ ನರ್ಸ್‌ಗಳು ಪ್ರತಿಭಟನೆ ನಡೆಸಿದರು
ಮೈಸೂರಿನ ಕೆ.ಆರ್.ಆಸ್ಪತ್ರೆಯ ಪ್ರವೇಶದ್ವಾರದಲ್ಲಿ ಮಂಗಳವಾರ ಆಸ್ಪತ್ರೆಯ ಟ್ರೈನಿ ಸ್ಟಾಫ್ ನರ್ಸ್‌ಗಳು ಪ್ರತಿಭಟನೆ ನಡೆಸಿದರು   

ಮೈಸೂರು: ಇಲ್ಲಿನ ಕೆ.ಆರ್.ಆಸ್ಪತ್ರೆಯಲ್ಲಿ ಆರಂಭವಾಗಿರುವ ಟ್ರೈನಿ ಸ್ಟಾಫ್ ನರ್ಸ್‌ಗಳ ಪ್ರತಿಭಟನೆ ಮಂಗಳವಾರವೂ ಮುಂದುವರಿದಿದೆ.

ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಒಂದಷ್ಟು ಹೊತ್ತು ನಿಂತು ಮೌನ ಪ್ರತಿಭಟನೆ ಮಾಡುವ ಮೂಲಕ ತಮ್ಮನ್ನೂ ಗುತ್ತಿಗೆ ಆಧಾರದ ಸಿಬ್ಬಂದಿಯನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿದರು.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರೂ ಸೇರಿದಂತೆ ಹಿರಿಯ ಅಧಿಕಾರಿಗಳು ಮೊದಲ ಸುತ್ತಿನ ಮಾತುಕತೆ ನಡೆಸಿದ್ದು, ಜುಲೈ 10ರಂದು ಈ ಸಂಬಂಧ ಮನವಿ ಸಲ್ಲಿಸುವ ಭರವಸೆ ನೀಡಿದರು ಎಂದು ಟ್ರೈನಿ ಸ್ಟಾಫ್ ನರ್ಸ್‌ವೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಬುಧವಾರದಿಂದ ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು. ಇದಕ್ಕೂ ಬಗ್ಗದಿದ್ದರೆ ವೈದ್ಯಕೀಯ ಶಿಕ್ಷಣ ಸಚಿವರಿಗೆ, ಮುಖ್ಯಮಂತ್ರಿಗೆ, ಆರೋಗ್ಯ ಮಂತ್ರಿಗಳಿಗೆ ಏಕಕಾಲಕ್ಕೆ ಎಲ್ಲರೂ ಟ್ವಿಟರ್‌ ಮೂಲಕ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಲಾಕ್‌ಡೌನ್‌ ಅವಧಿಯನ್ನು ಕರ್ತವ್ಯವೆಂದು ಪರಿಗಣಿಸಲು ಮನವಿ

ಮೈಸೂರು: ಲಾಕ್‌ಡೌನ್‌ ಅವಧಿಯನ್ನು ಕರ್ತವ್ಯವೆಂದು ಪರಿಗಣಿಸುವಂತೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಮೈಸೂರು ಜಿಲ್ಲಾ ವಿಭಾಗದ ಪದಾಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಪತ್ರ ಬರೆದಿದ್ದಾರೆ.

ರಾಷ್ಟ್ರೀಯ ಆರೋಗ್ಯ ತುರ್ತುಪರಿಸ್ಥಿತಿಯಲ್ಲಿ ಅತಿಥಿ ಉಪನ್ಯಾಸಕರ ಬದುಕು ಕೊಚ್ಚಿಕೊಂಡು ಹೋಗುತ್ತಿದೆ. ಲಾಕ್‌ಡೌನ್‌ ಅವಧಿಯ ಸಂಬಳವನ್ನು ನೀಡದೇ ಇರುವುದು ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಎಂಎಚ್‌ಆರ್‌ಡಿ ನಿರ್ದೇಶನದ ಅನ್ವಯ ಲಾಕ್‌ಡೌನ್‌ ಅವಧಿಗೆ ಪೂರ್ಣ ಪ್ರಮಾಣದ ವೇತನ ನೀಡಬೇಕು ಎಂದು ಅವರು ಕೋರಿದ್ದಾರೆ.

ಈಗಾಗಲೇ ಹರಿಯಾಣ ಮತ್ತು ಪಶ್ಚಿಮ ಬಂಗಾಳದಲ್ಲಿ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಲಾಗಿದೆ. ಇದೇ ಮಾದರಿಯಲ್ಲಿ ರಾಜ್ಯದಲ್ಲೂ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಹದೇವಯ್ಯ, ಪ್ರಧಾನ ಕಾರ್ಯದರ್ಶಿ ಹನುಮಂತೇಶ್, ಸಂಘಟನಾ ಕಾರ್ಯದರ್ಶಿ ಡಾ.ಬಾಬೂರಾಜ್ ಹಾಗೂ ಇತರರು ಪತ್ರವನ್ನು ಜಿಲ್ಲಾಧಿಕಾರಿಗೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.