ADVERTISEMENT

ಕಠಿಣ ಪರಿಶ್ರಮ, ಶ್ರದ್ಧೆಯಿಂದ ಯಶಸ್ಸು: ಡಾ.ಸಿ.ಜಿ. ಬೆಟಸೂರಮಠ

​ಪ್ರಜಾವಾಣಿ ವಾರ್ತೆ
Published 29 ಜೂನ್ 2022, 15:38 IST
Last Updated 29 ಜೂನ್ 2022, 15:38 IST
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಬುಧವಾರ ಆಯೋಜಿಸಿದ್ದ ಯುಜಿಸಿ-ನೆಟ್, ಕೆ-ಸೆಟ್ ಮತ್ತು ಪರೀಕ್ಷಾ ತರಬೇತಿ ಶಿಬಿರವನ್ನು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ ಉದ್ಘಾಟಿಸಿದರು
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಬುಧವಾರ ಆಯೋಜಿಸಿದ್ದ ಯುಜಿಸಿ-ನೆಟ್, ಕೆ-ಸೆಟ್ ಮತ್ತು ಪರೀಕ್ಷಾ ತರಬೇತಿ ಶಿಬಿರವನ್ನು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ ಉದ್ಘಾಟಿಸಿದರು   

ಮೈಸೂರು: ‘ಕಠಿಣ ಪರಿಶ್ರಮ ಮತ್ತು ಶ್ರದ್ಧೆಯಿಂದ ಅಧ್ಯಯನ ಮಾಡಿದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸಬಹುದು’ ಎಂದು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಮುಕ್ತ ಗಂಗೋತ್ರಿಯ ಕಾವೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ 45 ದಿನಗಳ ಯುಜಿಸಿ-ನೆಟ್, ಕೆ-ಸೆಟ್ ಮತ್ತು ಪರೀಕ್ಷಾ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹಲವು ಆಯ್ಕೆಗಳಿವೆ. ಯಾವುದೇ ಗೊಂದಲಕ್ಕೆ ಒಳಗಾಗದೆ ಯೋಗ್ಯ ಮಾರ್ಗ ಕಂಡುಕೊಳ್ಳಬೇಕು. ಪರೀಕ್ಷೆಗಳಲ್ಲಿ ವಿಫಲವಾದಾಗ ಕಂಗಾಲಾಗದೆ ಮತ್ತೆ ಪ್ರಯತ್ನಿಸಬೇಕು’ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, ‘ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಮಾರ್ಗದರ್ಶನ ಹಾಗೂ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ಸಿದ್ಧವಿದ್ದೇವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅವಕಾಶಗಳು ಬಹಳ ಇದ್ದರೂ ಪ್ರತಿಸ್ಪರ್ಧಿಗಳು ಹೆಚ್ಚಿರುತ್ತಾರೆ. ಹೀಗಾಗಿ, ಹೆಚ್ಚಿನ ಅಧ್ಯಯನ ಮತ್ತು ವಿಷಯಗಳ ಬಗ್ಗೆ ಆಳವಾದ ಜ್ಞಾನ ಹೊಂದಿರುವುದು ಅವಶ್ಯವಾಗಿದೆ’ ಎಂದು ತಿಳಿಸಿದರು.

ಕುಲಸಚಿವ ಪ್ರೊ.ಆರ್.ರಾಜಣ್ಣ, ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಬಿ. ಪ್ರವೀಣ, ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.