ಮೈಸೂರು: ‘ಆದಿವಾಸಿಗಳು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಮುಂದಾಗಬೇಕು’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರ್‌ನಾಥ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 1010 ಆದಿವಾಸಿಗಳು ಗ್ಯಾರಂಟಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಲು ಮುಂದೆ ಬಂದಿಲ್ಲ. ಅಂತಹವರನ್ನು ಗುರುತಿಸಿ ಅವರ ಮನೆ ಬಾಗಿಲಿಗೆ ಸೇವೆ ಒದಗಿಸಲಾಗುವುದು ಎಂದರು.
ಸಮಿತಿ ಜಿಲ್ಲಾ ಉಪಾಧ್ಯಕ್ಷ ಶಿವಕುಮಾರ್ ಮಾತನಾಡಿ, ‘ಆದಿವಾಸಿಗಳಿಗೆ ಸೌಲಭ್ಯ ತಲುಪಿಸುವ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುವುದು ಸರಿಯಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಜತೆಗೆ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ (ಐಟಿಡಿಪಿ) ಅಧಿಕಾರಿಗಳು ಸಹ ಜವಾಬ್ದಾರಿ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು ಎಂದರು.
ಕಳೆದ ಸಭೆಯಲ್ಲಿ ಅಧಿಕಾರಿಗಳು ನೀಡಿದ ವರದಿಯ ಪ್ರಕಾರ 1026 ಆದಿವಾಸಿಗಳು ನೋಂದಣೆ ಆಗಿರಲಿಲ್ಲ. ಈ ಪೈಕಿ ಕೇವಲ 16 ಜನರನ್ನು ಮಾತ್ರ ನೋಂದಣಿ ಮಾಡಲಾಗಿದ್ದು, ಇನ್ನೂ 1,010 ಆದಿವಾಸಿಗಳ ನೋಂದಣಿ ಬಾಕಿ ಇದೆ ಎಂದು ತಿಳಿಸಿದರು.
ಸಮಿತಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ‘ಗ್ಯಾರಂಟಿ ಯೋಜನೆಗೆ ಪಡಿತರ, ಆಧಾರ್, ಬ್ಯಾಂಕ್ ಖಾತೆಯ ಅವಶ್ಯಕತೆ ಇದೆ. ಆದರೆ, ಸಾಕಷ್ಟು ಆದಿವಾಸಿಗಳ ಬಳಿ ಪಡಿತರ, ಆಧಾರ್, ಬ್ಯಾಂಕ್ ಖಾತೆ ಇಲ್ಲ. ಅವರಿಗೆ ಸರ್ಕಾರದ ಸೌಲಭ್ಯ ಪಡೆಯುವ ಮಾಹಿತಿ ಇರುವುದಿಲ್ಲ. ಹಾಗಾಗಿ ಅಧಿಕಾರಿಗಳು ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು’ ಎಂದರು.
ಸಮಿತಿ ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರ್ ಮಾತನಾಡಿ, ‘ಕೆಲವರು ಮನೆ ನಿರ್ಮಾಣಕ್ಕೆ ಸಾಲ ಪಡೆಯುವ ಉದ್ದೇಶದಿಂದ ಐಟಿ ರಿಟರ್ನ್ ಮಾಡಿಸಿರುತ್ತಾರೆ. ಅವರು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಈ ರೀತಿ ಸಮಸ್ಯೆ ಎದುರಿಸುತ್ತಿರುವವರಿಗೆ ಅಧಿಕಾರಿಗಳು ಯಾವ ಕಾರಣಕ್ಕೆ ಅರ್ಜಿ ತಿರಸ್ಕೃತಗೊಂಡಿದೆ ಎಂಬುದರ ಕುರಿತು ಹಿಂಬರಹ ನೀಡಬೇಕು’ ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್, ‘ಆದಿವಾಸಿಗಳಿಗೆ ಸೌಲಭ್ಯ ತಲುಪಿಸುವ ವಿಚಾರದಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಐಟಿಡಿಪಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಲಾಗುವುದು’ ಎಂದು ತಿಳಿಸಿದರು.
‘ಗ್ಯಾರಂಟಿ ಯೋಜನೆ ಜಾರಿಯಾದ ನಂತರ ಇದುವರೆಗೆ ಜಿಲ್ಲೆಯ ಫಲಾನುಭವಿಗಳಿಗೆ ಯೋಜನೆಯ ಮೂಲಕ ₹ 28,278 ಕೋಟಿ ಹಂಚಿಕೆಯಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ ಹೇಳಿದರು.
‘ಕೆಲ ತಾಂತ್ರಿಕ ದೋಷದಿಂದ ಕೆಲವರಿಗೆ ಹಣ ಸಕಾಲದಲ್ಲಿ ಪಾವತಿಯಾಗದೆ ಇರಬಹುದು. ಆದರೆ, ತಾಂತ್ರಿಕ ದೋಷ ಪರಿಹಾರವಾದ ನಂತರ ಎಲ್ಲರಿಗೂ ಹಂಚಿಕೆಯಾಗಲಿದೆ’ ಎಂದು ಹೇಳಿದರು.
ಸಮಿತಿ ಜಿಲ್ಲಾ ಉಪಾಧ್ಯಕ್ಷ ಹುಣಸೂರು ಬಸವಣ್ಣ, ಸದಸ್ಯರಾದ ಯೋಗೀಶ್, ಉದಯಶಂಕರ್, ಮಹದೇವು, ಉತ್ತನಹಳ್ಳಿ ಶಿವಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.