ಸಿದ್ದರಾಮಯ್ಯ
ನಂಜನಗೂಡು (ಮೈಸೂರು ಜಿಲ್ಲೆ): ‘ಉಪ್ಪಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಶ್ರೀಕಂಠೇಶ್ವರ ದೇಗುಲದ ಆವರಣದಲ್ಲಿ ಭಾನುವಾರ ನಡೆದ ‘ಭಗೀರಥ ಜಯಂತ್ಯೋತ್ಸವ’ದಲ್ಲಿ ಉಪ್ಪಾರ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ‘ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ವರದಿಯು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮೋದನೆ ನೀಡಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು’ ಎಂದರು.
‘ಸಮುದಾಯವು ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿದೆ. ಸಾಮಾಜಿಕ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದ್ದು, ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು. ಅಪೂರ್ಣಗೊಂಡಿರುವ ಉಪ್ಪಾರ ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.
ಚಿತ್ರದುರ್ಗದ ಭಗೀರಥ ಮಹಾಸಂಸ್ಥಾನ ಮಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ‘ಮೈಸೂರು, ಚಾಮರಾಜನಗರ ಭಾಗದಲ್ಲಿ ಸಮುದಾಯದವರು ಹೆಚ್ಚಿದ್ದು, ಶಾಖಾ ಮಠ ಹಾಗೂ ಶಿಕ್ಷಣ ಸಂಸ್ಥೆ ಸ್ಥಾಪಿಸಲು 5 ಎಕರೆ ಭೂಮಿ ನೀಡಬೇಕು. ಮಠದಲ್ಲಿ ನಿರ್ಮಿಸಲು ಉದ್ದೇಶಿಸಿರುವ 60 ಅಡಿ ಎತ್ತರದ ಭಗೀರಥ ಏಕಶಿಲಾ ಮೂರ್ತಿಗೆ ಅನುದಾನ ಬಿಡುಗಡೆ ಮಾಡಬೇಕು’ ಎಂದು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.