ADVERTISEMENT

ಮೈಸೂರಿಗೆ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2025, 7:14 IST
Last Updated 9 ನವೆಂಬರ್ 2025, 7:14 IST
   

ಮೈಸೂರು: ನಗರಕ್ಕೆ ಭಾನುವಾರ ಮಧ್ಯಾಹ್ನ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಶಿಷ್ಟಾಚಾರದ ಪ್ರಕಾರ ಬರಮಾಡಿಕೊಳ್ಳಲಾಯಿತು.

ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿದ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್, ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ದಕ್ಷಿಣ ವಲಯ ಡಿಐಜಿಪಿ ಡಾ.ಎಂ.ಬಿ. ಬೋರಲಿಂಗಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಕಮಿಷನರ್‌ ಸೀಮಾ ಲಾಟ್ಕರ್‌ ಮೊದಲಾದವರು ಬರಮಾಡಿಕೊಂಡರು.

ಉಪರಾಷ್ಟ್ರಪತಿಯಾದ ನಂತರ ಇದೇ ಮೊದಲ ಬಾರಿಗೆ ನಗರಕ್ಕೆ ಭೇಟಿ ನೀಡಿರುವ ರಾಧಾಕೃಷ್ಣನ್ ಅವರು, ಶಿವರಾತ್ರೀಶ್ವರ ನಗರದಲ್ಲಿರುವ ಜೆಎಸ್‌ಎಸ್‌ ವೈದ್ಯಕೀಯ ಕಾಲೇಜು ಕ್ಯಾಂಪಸ್‌ನಲ್ಲಿರುವ ರಾಜೇಂದ್ರ ಸಭಾಂಗಣದಲ್ಲಿ ನಡೆಯಲಿರುವ ಜೆಎಸ್‌ಎಸ್‌ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ (ಜೆಎಸ್‌ಎಸ್‌–ಎಎಚ್‌ಇಆರ್‌) 16ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವರು. ನಂತರ ಚಾಮುಂಡಿಬೆಟ್ಟದ ಪಾದದಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆಯುವರು.

ADVERTISEMENT

ಮಧ್ಯಾಹ್ನ 3ರ ಸುಮಾರಿಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವರು. ಅವರು ಭೇಟಿ ಕೊಡುತ್ತಿರುವ ಕಾರಣದಿಂದಾಗಿ, ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೆಚ್ಚಿನ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.