ADVERTISEMENT

ನೀರಿಗಾಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

ಹಿನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 4 ಮೇ 2019, 1:25 IST
Last Updated 4 ಮೇ 2019, 1:25 IST
ಹಿನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ನಿವಾಸಿಗಳು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯ (ಕಮ್ಯೂನಿಸ್ಟ್) ನೇತೃತ್ವದಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು
ಹಿನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ನಿವಾಸಿಗಳು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯ (ಕಮ್ಯೂನಿಸ್ಟ್) ನೇತೃತ್ವದಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು   

ಮೈಸೂರು: ಹಿನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ನಿವಾಸಿಗಳು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯ (ಕಮ್ಯೂನಿಸ್ಟ್) ನೇತೃತ್ವದಲ್ಲಿ ಸೇರಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

ಪಂಚಾಯಿತಿ ವ್ಯಾಪ್ತಿಯಲ್ಲಿ 35 ಸಾವಿರಕ್ಕೂ ಹೆಚ್ಚು ಜನ ವಾಸವಿದ್ದಾರೆ. ಇರುವ 28 ಕೊಳವೆಬಾವಿಗಳಲ್ಲಿ 25 ಕೊಳೆವೆಬಾವಿಗಳು ಬತ್ತಿ ಹೋಗಿವೆ. ಇದರಿಂದ ನೀರಿನ ಸಮಸ್ಯೆ ಬಿಗಡಾಯಿಸಿದೆ ಎಂದು ಅವರು ಕಿಡಿಕಾರಿದರು.

ADVERTISEMENT

ಹಿನಕಲ್‌ಗೆ ಕೂಗಳತೆ ದೂರದಲ್ಲಿರುವ ಇತರ ಬಡಾವಣೆಗಳಿಗೆ ಕಾವೇರಿ ಮತ್ತು ಕಬಿನಿ ನದಿ ಮೂಲದಿಂದ ಕುಡಿಯುವ ನೀರನ್ನು ಸರಬರಾಜಾಗುತ್ತಿದೆ. ಇಲ್ಲಿಗೆ ನೀರನ್ನು ಸರಬರಾಜು ಮಾಡುವ ಕೊಳವೆಗಳು ಹಿನಕಲ್‌ ಮೂಲಕವೇ ಹಾದು ಹೋಗಿವೆ. ಹೀಗಿದ್ದರೂ ನೀರು ಸರಬರಾಜು ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಾಲಿಕೆಯಾಗಲಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವಾಗಲಿ, ಪಂಚಾಯಿತಿಯಾಗಲಿ ಸಮರ್ಪಕವಾಗಿ ಕುಡಿಯುವ ನೀರನ್ನು ಸರಬರಾಜು ಮಾಡುವುದಕ್ಕೆ ಆಸಕ್ತಿ ವಹಿಸಿಲ್ಲ. ಇದರಿಂದ ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಅವರು ಹೇಳಿದರು.

ನೀರು ತರುವುದಕ್ಕೆ ಮಕ್ಕಳು, ಮಹಿಳೆಯರು ಕಿ.ಮೀ. ದೂರ ನಡೆಯಬೇಕಿದೆ. ಗಂಟೆಗಟ್ಟಲೆ ಕಾಯಬೇಕಿದೆ ಎಂದು ಅವರು ಅಳಲು ತೋಡಿಕೊಂಡರು.

ಮುಖಂಡರಾದ ಎಂ.ಉಮಾದೇವಿ, ವಿ.ಯಶೋಧರ್, ಹರೀಶ್, ಎಸ್.ಎಚ್.ಸುನೀಲ್, ಟಿ.ಆರ್.ಸುಮಾ, ಆಕಾಶ್‌ಕುಮಾರ್, ಕಲಾವತಿ, ಅಭಿಲಾಷ್, ಅನಿಲ್, ಪುಟ್ಟರಾಜು, ಮುದ್ದುಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.