
ಮೈಸೂರು: ‘ಜಿಲ್ಲೆಯ ತಿ.ನರಸೀಪುರದಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ಕೆಎಸ್‌ಐಸಿ ಜಾಗ ನೀಡಬಾರದು. ಸರ್ಕಾರವು ಈ ನಿಟ್ಟಿನಲ್ಲಿ ಕೈಗೊಂಡಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಕೋರಿದ್ದಾರೆ.
ಇಲ್ಲಿಗೆ ಬುಧವಾರ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿರುವ ಅವರು, ‘ಸಾಂಸ್ಕೃತಿಕ ನಗರಿ ಮೈಸೂರು ಇಂದಿಗೂ ರೇಷ್ಮೆ ಸೀರೆಗಳಿಗೆ ಹೆಸರುವಾಸಿಯಾಗಿದೆ. ತಿ. ನರಸೀಪುರದಲ್ಲಿರುವ ಕೆಎಸ್‌ಐಸಿ ರೇಷ್ಮೆ ಕಾರ್ಖಾನೆಯ ಘಟಕವು ನೂರಾರು ಕಾರ್ಮಿಕರಿಗೆ ಜೀವನಾಡಿಯಾಗಿದೆ. ಈ ನಿಟ್ಟಿನಲ್ಲಿ ಅದನ್ನು ಉಳಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದ್ದಾರೆ.
‘ಕೆಎಸ್‌ಐಸಿ ಫಿಲೇಚರ್ ಕಾರ್ಖಾನೆಯ ಆವರಣದಲ್ಲಿ ಕ್ರೀಡಾಂಗಣವನ್ನು ನಿರ್ಮಿಸಲು ಕ್ರೀಡಾ ಇಲಾಖೆಗೆ 6 ಎಕರೆ 8 ಗುಂಟೆ ಜಾಗ ಹಸ್ತಾಂತರಿಸಲಾಗಿದೆ. ಅಲ್ಲಿ ಕ್ರೀಡಾಂಗಣ ನಿರ್ಮಿಸಿದರೆ ಕಾರ್ಮಿಕರು ಮತ್ತು ರೈತರ ಬದುಕು ದುಸ್ತರವಾಗಲಿದೆ. ಈ ನಿಟ್ಟಿನಲ್ಲಿ ಈ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಮನವಿ ಮಾಡಿದ್ದಾರೆ.
‘ಆ ಕಾರ್ಖಾನೆ ಆವರಣದಲ್ಲಿ 500ಕ್ಕೂ ಹೆಚ್ಚು ತೇಗ, ಶ್ರೀಗಂಧ ಮರಗಳಿವೆ. ಸ್ಟೇಡಿಯಂ ನಿರ್ಮಿಸಲು ಮುಂದಾದರೆ ಈ ಮರಗಳು ನಾಶವಾಗಲಿವೆ. ಐತಿಹಾಸಿಕ ಘಟಕವನ್ನು ಸಂರಕ್ಷಿಸಬೇಕಾದ ಅಗತ್ಯವಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ’ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಕ್ರೀಡಾಂಗಣಕ್ಕೆ ಪರ್ಯಾಯವಾಗಿ ಕೊರ್ಲಹಳ್ಳಿ ಅಥವಾ ಇತರ ಸರ್ಕಾರಿ ಜಾಗ ಗುರುತಿಸಿ ಬಳಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಕೋರಲಾಗಿದೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
‘ಮೈಸೂರು ವಿಮಾನನಿಲ್ದಾಣ ವಿಸ್ತರಣೆ ಪ್ರಕ್ರಿಯೆ ತ್ವರಿತಗೊಳಿಸಲು ಹಾಗೂ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಅವರನ್ನು ವಿನಂತಿಸಲಾಗಿದೆ’ ಎಂದು ತಿಳಿಸಿದ್ದಾರೆ.
‘ಭೂ ಸ್ವಾಧೀನ ಪ್ರಕ್ರಿಯೆ ಹಾಗೂ ಇತರ ಕೆಲಸಗಳು ಬಹುತೇಕ ಪೂರ್ಣಗೊಂಡಿದೆ ಎಂಬ ಭರವಸೆ ಇದೆ. ಇದರ ಬಗ್ಗೆ ಖಚಿತತೆ ಸಿಕ್ಕ ಕೂಡಲೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತೇನೆ’ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.