ಯತೀಂದ್ರ ಸಿದ್ದರಾಮಯ್ಯ
ಮೈಸೂರು: ‘ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪಿನ ಮೇಲೆ ಪರಿಣಾಮ ಬೀರಲು ಜಾರಿ ನಿರ್ದೇಶನಾಲಯವು(ಇಡಿ) ತಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪ ಮಾಡಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಉದ್ದೇಶದ ಹಿಂದೆ ಬೇರೆ ಹುನ್ನಾರ ಇರಬಹುದು’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ದೂರಿದರು.
ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ಇಡಿ ಮುಟ್ಟುಗೋಲು ಹಾಕಿಕೊಂಡಿರುವ ನಿವೇಶನಗಳಲ್ಲಿ, ತಾಯಿ ಪಾರ್ವತಿ ಅವರಿಗೆ ಹಂಚಿಕೆಯಾಗಿದ್ದ 14 ನಿವೇಶನಗಳು ಸೇರಿಲ್ಲ. ಹೀಗಿದ್ದರೂ ಬಿಜೆಪಿಯು ಸಿದ್ದರಾಮಯ್ಯ ಅವರ ಹೆಸರನ್ನು ಹಾಳು ಮಾಡಲು ಇಡಿ ಮೂಲಕ ಯತ್ನಿಸುತ್ತಿದೆ’ ಎಂದು ಆರೋಪಿಸಿದರು.
‘ಇಡಿ ಅಧಿಕಾರಿಗಳು ಗೊಂದಲ ಸೃಷ್ಟಿಸಲು ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಮುಡಾ ಕುರಿತು ತನಿಖೆ ನಡೆಯುತ್ತಿದೆ. ಸಿಬಿಐ ತನಿಖೆಗೆ ವಹಿಸಬೇಕೇ ಬೇಡವೇ ಎಂಬ ವಿಚಾರ ಜ.26ರಂದು ನ್ಯಾಯಾಲಯದ ಮುಂದೆ ಬರುತ್ತಿದೆ. ಇಂತಹ ಹೊತ್ತಿನಲ್ಲಿ ಇಡಿ ಅಧಿಕಾರಿಗಳು ನ್ಯಾಯಾಲಯವನ್ನು ತಪ್ಪು ದಾರಿಗೆಳೆಯಲು ಉದ್ದೇಶಪೂರ್ವಕವಾಗಿ ಟ್ವೀಟ್ ಮಾಡಿ ಹಂಚಿಕೊಳ್ಳುವ ಕೆಲಸ ಮಾಡಿದ್ದಾರೆ. ನಾನು ಕಾನೂನು ಪ್ರಕಾರ ಹೋರಾಟ ಮಾಡುತ್ತೇವೆ’ ಎಂದು ಹೇಳಿದರು.
‘ನ್ಯಾಯಾಲಯದ ತೀರ್ಪು ನೀಡುವ ಮುನ್ನವೇ ಹೆಸರು ಪ್ರಸ್ತಾಪಿಸಿರುವುದು ಕಾನೂನು ಬಾಹಿರವಾಗಿದೆ. 50:50 ಅನುಪಾತದಡಿ ನಿವೇಶನ ಹಂಚಿಕೆಯಾಗಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಅಂದಿನ ಸರ್ಕಾರದಲ್ಲಿ ಇದ್ದವರನ್ನು ಹಾಗೂ ಆಗಿನ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಲಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.