ADVERTISEMENT

ಕಾಂಗ್ರೆಸ್‌ ಕಾರ್ಯಕರ್ತರ ಬಂಧನ, ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2017, 8:55 IST
Last Updated 27 ಅಕ್ಟೋಬರ್ 2017, 8:55 IST

ರಾಯಚೂರು: ಕಳೆದ ಬಾರಿಯ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ನಗರದ ಪ್ರಧಾನ ಅಂಚೆಕಚೇರಿಗೆ ಗುರುವಾರ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್‌ನ ನಗರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಆನಂತರ ಬಿಡುಗಡೆ ಮಾಡಿದರು.

ನಗರದ ಕೇಂದ್ರ ಬಸ್‌ ನಿಲ್ದಾಣದಿಂದ ಅಂಚೆ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ, ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಪೊಲೀಸ್‌ ವಾಹನಗಳಲ್ಲಿ ಕರೆದು ಹೋಗಿದ್ದರು.

ಪ್ರತಿವರ್ಷ ಎರಡು ಕೋಟಿ ಉದ್ಯೋಗಗಳನ್ನು ಸೃಷ್ಟಿ ಮಾಡುವುದಾಗಿ ಸುಳ್ಳು ಭರವಸೆ ನೀಡಿರುವ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ, ಹುದ್ದೆಗಳನ್ನೂ ಭರ್ತಿ ಮಾಡಲು ಕೂಡ ಮುಂದಾಗಿಲ್ಲ. ಮೂರು ವರ್ಷಗಳು ಕಳೆದರೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿರುದ್ಯೋಗ ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರುದ್ಯೋಗ ಸಮಸ್ಯೆ ಮತ್ತಷ್ಟು ಅಧಿಕಗೊಂಡಿದೆ ಎಂದು ದೂರಿದರು.

ADVERTISEMENT

ಸುಳ್ಳು ಆಶ್ವಾಸನಗೆಳನ್ನು ನೀಡುವ ಮೂಲಕ ಜನರನ್ನು ಮರಳು ಮಾಡುತ್ತಿರುವ ಪ್ರಧಾನಮಂತ್ರಿ ಹಾಗೂ ಸಚಿವರು ಕೇವಲ ಮಾತಿನಲ್ಲೇ ಅಭಿವೃದ್ಧಿ ಬಿಂಬಿಸುತ್ತಿದ್ದಾರೆ. ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸದ ಈ ಸರ್ಕಾರ ಸುಳ್ಳು ಭರವಸೆಗಳ ಸರ್ಕಾರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಕೆ.ರಂಜಿತ ಹೀರಾ, ಉಪಾಧ್ಯಕ್ಷ ಸೈಯದ್ ಮೋಸಿನ್, ವಸಂತಕುಮಾರ, ರಾಜೇಂದ್ರ ಬಂಡೆ, ಶೇಖ್‌ ಸಲ್ಮಾನ, ಶೋಯೆಬ್‌, ಸುಲೆಮನ್‌, ಖರೇಶಿ, ವಿನೋದ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.