ಮಾನ್ವಿ: ತುಂಗಭದ್ರಾ ಎಡದಂಡೆ ಕಾಲುವೆ ನೀರು ತಾಲ್ಲೂಕಿನ ಕೊನೆಭಾಗದ ಟೇಲೆಂಡ್ ರೈತರ ಜಮೀನುಗಳಿಗೆ ತಲುಪಲು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರ್ ಎಮ್.ಗಂಗಪ್ಪ ಕಲ್ಲೂರು ಸೂಚನೆ ನೀಡಿದರು.
ಶುಕ್ರವಾರ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಜರುಗಿದ ತಾಲ್ಲೂಕಿನ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರುಈಚೆಗೆ ನಡೆದ ಐಸಿಸಿ ಸಭೆಯಲ್ಲಿ ತುಂಗಭದ್ರಾ ಎಡದಂಡೆ ನಾಲೆಗೆ 3,500ಕ್ಯುಸೆಕ್ ನೀರು ನಾಲೆಗೆ ಹರಿಸಲು ತೀರ್ಮಾನಿಸಲಾಗಿದೆ.
ತುಂಗಭದ್ರಾ ಎಡದಂಡೆ ನಾಲೆಯ ನೀರನ್ನು ರೈತರಿಗೆ ಸಮರ್ಪಕವಾಗಿ ಒದಗಿಸಲು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಆಯಾ ವ್ಯಾಪ್ತಿಯ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ನೆರವು ಪಡೆದುಕೊಳ್ಳಬೇಕು. ಕೊನೆ ಭಾಗಕ್ಕೆ ನೀರು ತಲುಪಿಸಲು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದರು. ಅಕ್ರಮವಾಗಿ ಕಾಲುವೆ ನೀರು ಪಡೆಯುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
ಅಕ್ರಮವಾಗಿ ನೀರು ಪಡೆಯಲು ಪಂಪ್‌ಸೆಟ್ ಇನ್ನಿತರ ಯಂತ್ರೋಪಕರಣ ಬಳಕೆ ಮಾಡಿದರೆ ವಶಪಡಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಕೆಳಭಾಗದ ರೈತರ ಜಮೀನುಗಳಿಗೆ ಸಮರ್ಪಕ ನೀರು ಹರಿಸುವ ಸದುದ್ದೇಶದಿಂದ ಜಲಸಂಪನ್ಮೂಲ ಇಲಾಖೆ, ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಿಬ್ಬಂದಿಗಳ 7ತಂಡಗಳನ್ನು ರಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸರ್ಕಲ್‌ಇನ್ಸ್‌ಪೆಕ್ಟರ್ ಶ್ರೀಧರದೊಡ್ಡಿ, ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳಾದ ರಾಮಪ್ರಸಾದ, ವಿನೋದಕುಮಾರ ಗುಪ್ತಾ, ವೀರಾಸಿಂಗ್ ರಾಠೋಡ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.