ರಾಯಚೂರು: ನಗರದ ಸೆಂಟ್‌ಮೇರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ನಡೆಯುತ್ತಿರುವ ಡೊನೇಶನ್ ಹಾವಳಿ ತಡೆಗಟ್ಟಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಎದುರು ಧರಣಿ ನಡೆಸಿದರು.
ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶ ಸಂದರ್ಭದಲ್ಲಿ ಡೊನೇಶನ್ ಹಾವಳಿಯಿಂದ ಕಾನೂನುಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಸೆಂಟ್‌ಮೇರಿ ಶಾಲೆಯಲ್ಲಿ ಶ್ರೀಮಂತ ಹಾಗೂ ಅಧಿಕಾರಿಗಳ ಮಕ್ಕಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತಿದೆ.
ಬಡತನ ರೇಖೆಗಿಂತ ಕೆಳಗಿರುವ ಬಡ ಕುಟುಂಬದ ಮಕ್ಕಳಿಗೆ ಈ ಶಾಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಆಪಾದಿಸಿದರು.
ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಡೊನೇಶನ್ ಹಾವಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು, ಡೋನೆಶನ್ ಪಡೆಯುತ್ತಿರುವ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ದಿನಗಳಲ್ಲಿ ಹಲವು ಸಂಘಟನೆಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಯುವಕ ಸಂಘದ ಅಧ್ಯಕ್ಷ ಆರ್.ಅಶೋಕ ಕುಮಾರ ಅವರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.
ರಾಮಣ್ಣ, ಹುಸೇನ್‌ಬಾಷಾ, ಸೂಗಪ್ಪ, ವಿರೇಶ, ಗೋಪಾಲ,ಚಂದ್ರು, ನಟರಾಜ, ಇಸ್ಮಾಯಿಲ್, ಚಿಂತಾಲ ಮಣಿ, ಸತ್ಯನಾರಾಯಣ, ನಾಗೇಶ, ಆಜಾಮ್,ಮನು, ಶಿವಶಂಕರ, ವೀರೇಶ, ಅನಿಲ್,ಅಕ್ಬರ್ ಅಲಿ, ರಹೀಮ್, ಖಾಜಾ, ಹರ್ಷಾ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.