ADVERTISEMENT

ನೀರು, ಮೇವು ಸಮರ್ಪಕ ಪೂರೈಕೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2012, 8:00 IST
Last Updated 7 ಆಗಸ್ಟ್ 2012, 8:00 IST

ರಾಯಚೂರು: ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ನಿರ್ಲಕ್ಷ್ಯವಹಿಸಿದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ರಾಜ್ಯ ಮೀನುಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಅಸ್ನೋಟಿಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲೆಯ ಬರಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಬರಗಾಲ ಪರಿಸ್ಥಿತಿ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು ಹಾಗೂ ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಕೆಲಸ ನೀಡುವ ಹಿನ್ನೆಲೆಯಲ್ಲಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಅಸ್ನೋಟಿಕರ್ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರದಿಂದ ಈಗಾಗಲೇ ಜಿಲ್ಲೆಯ ಕುಡಿಯುವ ನೀರು ಕಾಮಗಾರಿಗೆ ಸಂಬಂಧಿಸಿದಂತೆ 450 ಲಕ್ಷ ಹಣ ಬಿಡುಗಡೆಯಾಗಿದೆ 453 ಕಾಮಗಾರಿಗಳು ಪೂರ್ಣಗೊಂಡಿವೆ.  ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೋಡಲ್ ಅಧಿಕಾರಿಗಳ ನೇಮಕ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ವಿ ಸಾವಿತ್ರಿ ಅವರು ಸಭೆಗೆ  ವಿವರಿಸಿದರು.

ಮಾನ್ವಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ರೈತರಿಗೆ ಕೊಳವೆಬಾವಿ ಕೊರೆಯಲು 10 ಸಾವಿರ ಪಡೆಯಲಾಗಿದೆ ಎಂಬ ಕಳಂಕ ತರುತ್ತಿದ್ದಾರೆ ಎಂದು ಮಾನ್ವಿ ಶಾಸಕ ಹಂಪಯ್ಯ ನಾಯಕ ಅವರು ಸಭೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬೋರ್‌ವೇಲ್ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಬೇಕು, ಕಪ್ಪು ಪಟ್ಟಿಗೆ ಸೇರಿಸಬೇಕು. ಈ ಬಗ್ಗೆ ಕ್ರಮ ಕೈಗೊಳ್ಳದೇ ಇದ್ದರೆ ತಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಆನಂದ ಅಸ್ನೋಟಿಕರ್ ಅವರು ಅಧಿಕಾರಿಗೆ ಹೇಳಿದರು.

ನಗರಕ್ಕೆ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಎಕ್ಸ್‌ಪ್ರೆಸ್ ವಿದ್ಯುತ್ ಮಾರ್ಗವನ್ನು ಸರಿಯಾದ ರೀತಿ ಜೆಸ್ಕಾಂ ಅಧಿಕಾರಿಗಳು ನಿರ್ವಹಣೆ ಮಾಡುತ್ತಿಲ್ಲ. ಬೇರೆ ಕಡೆಯಲ್ಲಿ ಕುಡಿಯುವ ನೀರು ಪೂರೈಕೆಗೆ ನಿರಂತರ ವಿದ್ಯುತ್  ಸರಬರಾಜು ಮಾಡಲಾಗುತ್ತದೆ. ಆದರೆ, ರಾಯಚೂರು ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ನಿರಂತರ ವಿದ್ಯುತ್ ಪೂರೈಕೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸಯ್ಯದ್ ಯಾಸಿನ್ ಅವರು ಸಭೆಯಲ್ಲಿ ಸಚಿವರೆದುರು ಅಸಮಾಧಾನ ವ್ಯಕ್ತಪಡಿಸಿದರು.

ರಾಯಚೂರು ತಾಲ್ಲೂಕಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಯರಗೇರಾ ಹೋಬಳಿ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಇದೆ ಎಂದು ಶಾಸಕ ರಾಜಾ ರಾಯಪ್ಪ ನಾಯಕ ಅವರು ಸಭೆಯ ವಿವರಿಸಿದರು.

ರಾಯಚೂರು ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಟಾಸ್ಕಫೋರ್ಸ್ ಮೂಲಕ ಕ್ರಮ ಕೈಗೊಂಡಿದೆ. ಕುಡಿಯುವ ನೀರಿನ ತೀವ್ರ ಅಭಾವ ಇದ್ದ ಗ್ರಾಮಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಿಪಂ ಸಿಇಒ ಮನೋಜ ಜೈನ್ ಅವರು  ತಿಳಿಸಿದರು.

ಮಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿವೆ. ಜಾನುವಾರುಗಳಿಗೂ ಮೇವಿನ ಅಭಾವ ಇದೆ. ಆಡಳಿತ ಯಂತ್ರ ಗಮನಹರಿಸಿ ಚುರುಕಾಗಿ ಕಾರ್ಯನಿರ್ವಹಿಸಿ ಸಮಸ್ಯೆ ಹೋಗಲಾಡಿಸಬೇಕು ಎಂದು ಶಾಸಕ ಪ್ರತಾಪಗೌಡ ಪಾಟೀಲ್ ಅವರು ಹೇಳಿದರು.

ತುಂಗಭದ್ರಾ ಜಲಾಶಯದಿಂದ ಕಾಲುವೆಗೆ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಇದೇ 8ರಂದು ಸಭೆ ಕರೆಯಲಾಗಿದೆ. ಸಭೆ ನಂತರ ನೀರು ಕಾಲುವೆಗಳಿಗೆ ಹರಿಸಲಾಗುವುದು ಎಂದು ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಅಧ್ಯಕ್ಷ ಬಸವನಗೌಡ ಬ್ಯಾಗವಾಟ ಅವರು ಸಭೆಗೆ ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ ಬಿಸ್ನಳ್ಳಿ ಹಾಗೂ ಇತರ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.