ರಾಯಚೂರು: ಏಪ್ರಿಲ್ 15ರಿಂದ 18ರವರೆಗೆ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮವು ಜಿಲ್ಲೆಯಲ್ಲಿ ಶೇ 101.16ರಷ್ಟು ಯಶಸ್ವಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ವೆಂಕಟೇಶ ನಾಯಕ ತಿಳಿಸಿದ್ದಾರೆ.
5 ವರ್ಷದೊಳಗಿನ ಮಕ್ಕಳಿಗೆ ಈ ಬಾರಿ ಜಿಲ್ಲೆಯಲ್ಲಿ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ 288346 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಆದರೆ 291691 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಹೀಗಾಗಿ 101.16 ರಷ್ಟು ಸಾಧನೆ ಆಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶೇ 101.41 ಹಾಗೂ ನಗರ ಪ್ರದೇಶದಲ್ಲಿ ಶೇ 100.43 ಸಾಧನೆ ಆಗಿದೆ ಎಂದು ತಿಳಿಸಿದ್ದಾರೆ.
ರಾಯಚೂರು ತಾಲ್ಲೂಕಿನಲ್ಲಿ 82522 ಮಕ್ಕಳಿಗೆ (ಶೇ101.90), ದೇವದುರ್ಗ ತಾಲ್ಲೂಕಿನಲ್ಲಿ 40332 ಮಕ್ಕಳಿಗೆ (ಶೇ 100.97), ಲಿಂಗಸುಗೂರು ತಾಲ್ಲೂಕಿನಲ್ಲಿ 56491 ಮಕ್ಕಳಿಗೆ(ಶೇ102.50), ಸಿಂಧನೂರು ತಾಲ್ಲೂಕಿನಲ್ಲಿ 56545 ಮಕ್ಕಳಿಗೆ (ಶೇ 101.03), ಮಾನ್ವಿ ತಾಲ್ಲೂಕಿನ 55801 ಮಕ್ಕಳಿಗೆ(ಶೇ 99.06) ಪೋಲಿಯೊ ಲಸಿಕೆ ಹಾಕಲಾಗಿದೆ ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸಭೆ, ಪುರಸಭೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗ, ಸ್ವಯಂ ಸೇವಾ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ವೈದ್ಯಾಧಿಕಾರಿಗಳು, ಆರೋಗ್ಯ ಸಹಾಯಕಿಯರು ಹಾಗೂ ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳ್ಳಲು ಕಾರಣರಾಗಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.