ADVERTISEMENT

ಬರ ಪರಿಸ್ಥಿತಿ ನಿರ್ವಹಣೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2012, 9:30 IST
Last Updated 20 ಮಾರ್ಚ್ 2012, 9:30 IST

ರಾಯಚೂರು: ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಬಿಜೆಪಿ ಸರ್ಕಾರವು ಸಂಪೂರ್ಣವಾಗಿ ವಿಫಲಗೊಂಡಿದೆ. ರಾಜ್ಯ ಬಜೆಟ್ ಮಂಡನೆಯಲ್ಲಿಯೂ ಗೊಂದಲಗಳನ್ನು ಸೃಷ್ಟಿಸಿ ಕಾಲಹರಣ ಮಾಡುತ್ತಿದೆ ಎಂದು ಅಪಾದಿಸಿ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ  ನಡೆಸಿದರು.

ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ರಾಜ್ಯದ 110 ತಾಲ್ಲೂಕುಗಳಲ್ಲಿ ಬರಗಾಲ ಪರಿಸ್ಥಿತಿಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದರೂ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಬರಗಾಲ ಪರಿಸ್ಥಿತಿ ಇರುವುದರಿಂದ ಸರ್ಕಾರ ಕೈಗೊಳ್ಳಬೇಕಾದ ತುರ್ತು ಕ್ರಮ ಕೈಗೊಳ್ಳದೇ ಬರಗಾಲ ಹೆಸರಿನಲ್ಲಿ ಅವ್ಯವಹಾರದಲ್ಲಿ  ಮುಳುಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಮುಖ್ಯಮಂತ್ರಿಗಳು ಅಧಿಕಾರದ ದಾಹದಿಂದ ರಾಜ್ಯದ ಜನತೆಯನ್ನು ಬಲಿಯಾಗಿಸುತ್ತಿದ್ದಾರೆ ಎಂದು ಆಪಾದಿಸಿದರು.

ತಾಲ್ಲೂಕಿನ ಮಲಿಯಾಬಾದ್ ಗ್ರಾಮದಲ್ಲಿ ಕುಡಿಯುವ ನೀರಿನ ಯೋಜನೆಗಾಗಿ ಬೋಗಸ್ ಬಿಲ್ ಸೃಷ್ಟಿಸಿ ಅನುದಾನ ದುರ್ಬಳಕೆ ಮಾಡಲಾಗಿದೆ. ಕುಡಿಯುವ ನೀರಿನ ಪೈಪ್ ಲೈನ್ ಜೋಡಣೆ ಕಾಮಗಾರಿಯೂ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು.

ಜಿಲ್ಲಾಡಳಿತ ಮೇವು ಬ್ಯಾಂಕ್ ಆರಂಭಿಸದ ಹಿನ್ನೆಲೆಯಲ್ಲಿ ದನ ಕರುಗಳನ್ನು ಕಸಾಯಿ ಖಾನೆಗೆ ಸಾಗಿಸುವಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.ಬರಗಾಲದಲ್ಲಿರುವ ತಾಲ್ಲೂಕುಗಳಿಗೆ ವಿಶೇಷ ಅನುದಾನ ಸರ್ಕಾರ ನೀಡಲಿದೆ ಎಂದು ರೈತರು ಆಶಾಭಾವನೆಯನ್ನು ಹೊಂದಿದ್ದರು. ಸರ್ಕಾರ ಮಾತ್ರ ಯಾವುದೇ ರೀತಿಯಲ್ಲಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಬರಪರಿಸ್ಥಿತಿ ನಿರ್ವಹಿಸಲು ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸರ್ಕಾರಕ್ಕೆ ಬರಗಾಲ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಬೇಕು, ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳದೇ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎನ್.ಶಿವಶಂಕರ ವಕೀಲ, ನಗರ ಘಟಕದ ಅಧ್ಯಕ್ಷ ರಾಮಕೃಷ್ಣ, ನರಸಿಂಹಲು, ಆಂಜನೇಯ, ನರಸಪ್ಪ, ಖಲೀಲ್ ಪಾಷಾ, ನಾಗರಾಜ ಸ್ವಾಮಿ, ಶಿವಕುಮಾರ, ವಾಹಿದ್, ವೆಂಕಟೇಶ, ಸುಧಾಕರ, ಆಲಂಬಾಬು, ಜಂಬಲಿಂಗಯಾದವ್, ಮುನ್ನಾ ವರ್ಮಾ, ಮಹೆಬೂಬ್ ಪಾಷಾ, ಆಂಜನೇಯ, ವೀರೇಶ, ರಾಮಾಂಜನೇಯ, ಸಾಗರ ಶಫಿ, ಆರಫತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.