ADVERTISEMENT

‘ಬಾಬಾ ಸಾಹೇಬರು ವ್ಯಕ್ತಿಯಲ್ಲ, ಮಹಾಶಕ್ತಿ’

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2017, 9:47 IST
Last Updated 7 ಡಿಸೆಂಬರ್ 2017, 9:47 IST

ಸಿಂಧನೂರು: ನಗರದ ಮಿನಿವಿಧಾನಸೌಧ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 61ನೇ ಮಹಾಪರಿನಿರ್ವಾಣ ದಿನವನ್ನು ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇದಕ್ಕೂ ಮುನ್ನ ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ದಲಿತ ಸಮಾಜದ ಮುಖಂಡರು ತೆರಳಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ನಂತರ ಮಿನಿವಿಧಾನಸೌಧದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಶಿರಸ್ತೇದಾರ್ ಅಂಬಾದಾಸ್ ಪೂಜೆ ಸಲ್ಲಿಸಿದರು.

ತಹಶೀಲ್ದಾರ್ ವೆಂಕನಗೌಡ ಆರ್.ಪಾಟೀಲ್ ಮಾತನಾಡಿ, ‘ಅಂಬೇಡ್ಕರ್ ಎಂದರೆ ಬರೀ ವ್ಯಕ್ತಿಯಲ್ಲ. ಅವರು ಮಹಾನ್ ಶಕ್ತಿ. ಧ್ಯೇಯ, ತತ್ವವೇ ಅಂಬೇಡ್ಕರ್ ಆಗಿದ್ದಾರೆ. ದೇಶದ ಅಖಂಡತೆಗೆ ಅವರ ಸೇವೆ ಅನನ್ಯವಾದುದು. ಅವರನ್ನು ಕೇವಲ ಶೋಷಿತ ವರ್ಗದ ನಾಯಕರು ಎಂದು ಭಾವಿಸುವಂತಿಲ್ಲ. ಸಮಾಜದ ಎಲ್ಲ ವರ್ಗಗಳ ನಾಯಕರಾಗಿದ್ದಾರೆ. ಅಂಬೇಡ್ಕರ್ ಸಂಘರ್ಷದ ಹಾದಿ ತುಳಿಯದೆ ಸಾಮರಸ್ಯದ ಮೂಲಕ ಸಮಾಜವು ಒಗ್ಗೂಡುವಂತೆ ಮಾಡಿದ್ದಾರೆ. ಅವರ ವ್ಯಕ್ತಿತ್ವ, ಆದರ್ಶಗಳನ್ನು ಪಾಲನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ’ ಎಂದರು.

ADVERTISEMENT

ನಗರಸಭೆ ಅಧ್ಯಕ್ಷೆ ಮಂಜುಳಾ ಪಾಟೀಲ್ ಮಾತನಾಡಿ, ‘ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕು ಮತ್ತು ಜವಾಬ್ದಾರಿ ನೀಡಲಾಗಿದೆ. ನಾಗರಿಕರ ಹಕ್ಕುಗಳನ್ನು ಪ್ರತಿಪಾದಿಸುವುದರ ಜತೆಗೆ ಗುರುತರ ಜವಾಬ್ದಾರಿ ನಿರ್ವಹಿಸಬೇಕಿದೆ. ಯುವಜನರು ಸಂವಿಧಾನದ ಆಶಯಗಳನ್ನು ಅರ್ಥೈಸಿಕೊಳ್ಳಬೇಕಿದೆ’ ಎಂದು ಸಲಹೆ ನೀಡಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ಕಾಳಿಂಗಪ್ಪ ವಕೀಲ ಮಾತನಾಡಿ, ‘ಅಂಬೇಡ್ಕರ್ ಅವರ ಹೆಸರು ಹೇಳುವುದೇ ರೋಮಾಂಚನ ಉಂಟು ಮಾಡುತ್ತದೆ. ಸಮಾನತೆ ದೃಷ್ಟಿಯಲ್ಲಿ ಸಂವಿಧಾನ ರಚಿಸಿದ ಮಹಾನ್ ಚೇತನ. ನಾವೆಲ್ಲರೂ ಜೀವನದಲ್ಲಿ ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.

ನಗರಸಭೆ ಪೌರಾಯುಕ್ತ ವಿರೂಪಾಕ್ಷಿಮೂರ್ತಿ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಖಾಜಿಮಲಿಕ್ ವಕೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಎಂ.ಬಸಣ್ಣ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗರಾಜ ಬಿ.ಪಾಟೀಲ್, ಮುಖಂಡರಾದ ಯಮನಪ್ಪ ಮಲ್ಲಾಪೂರ, ಎಚ್.ಎಫ್.ಮಸ್ಕಿ, ಹನುಮಂತಪ್ಪ, ಅಯ್ಯಪ್ಪ, ಅಮರೇಶ, ನರಸಪ್ಪ, ಲಿಂಗಾಧರ್, ಬಾಲರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.