ADVERTISEMENT

ಸಂಕೀರ್ಣ ಸ್ಥಳಾಂತರಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 12 ಜನವರಿ 2012, 9:05 IST
Last Updated 12 ಜನವರಿ 2012, 9:05 IST
ಸಂಕೀರ್ಣ ಸ್ಥಳಾಂತರಕ್ಕೆ ವಿರೋಧ
ಸಂಕೀರ್ಣ ಸ್ಥಳಾಂತರಕ್ಕೆ ವಿರೋಧ   

ರಾಯಚೂರು: ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸ್ಥಳಾಂತರ ಕ್ರಮ ವಿರೋಧಿಸಿ ಬುಧವಾರ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಕೈಗೆ ಕೆಂಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಕಳೆದ ಕೆಲ ದಿನಗಳ ಹಿಂದೆ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು ಸ್ಥಳಾಂತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಎರಡು ಬಾರಿ ಮನವಿ ಸಲ್ಲಿಸಲಾಗಿದೆ. ಸಂಘದ ನೇತೃತ್ವದಲ್ಲಿ ನಿಯೋಗ ತೆರಳಿ ಮನವಿಯನ್ನು ಸಲ್ಲಿಸಲಾಗಿದೆ. ಆದರೂ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸ್ಥಳಾಂತರಿಸುವ ಕಾರ್ಯವನ್ನು ನಿಲ್ಲಿಸಿಲ್ಲ ಎಂದು ವಕೀಲರ ಸಂಘವು ಹೇಳಿದೆ.

ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸ್ಥಳಾಂತರಿಸುವುದರಿಂದ ಬಡ ಕಕ್ಷಿದಾರರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಈ ಎಲ್ಲ ಸಮಸ್ಯೆ ಗಂಭೀರವಾಗಿ ಪರಿಗಣಿಸಿ ಸ್ಥಳಾಂತರವನ್ನು ಸ್ಥಗಿತಗೊಳಿಸಬೇಕು ಎಂದು ಸಂಘವು ಒತ್ತಾಯಿಸಿದೆ.

ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸ್ಥಳಾಂತರ ಕೈಬಿಡದೇ ಇದ್ದರೆ ಎರಡನೇ ಹಂತವಾಗಿ ಇದೇ 17ರಿಂದ ಸರದಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಅಲ್ಲದೇ ಕೊನೆ ಹಂತವಾಗಿ ನ್ಯಾಯಾಲಯದ ಕಲಾಪದಿಂದ ಹೊರಗುಳಿಯುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಜಾ ಪಾಂಡುರಂಗ ನಾಯಕ ವಕೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸನಗೌಡ ಜಂಬಲದಿನ್ನಿ ವಕೀಲ ಅವರು ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.