ADVERTISEMENT

ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2012, 8:25 IST
Last Updated 21 ಏಪ್ರಿಲ್ 2012, 8:25 IST

ರಾಯಚೂರು: ಬರಗಾಲ ಪರಿಸ್ಥಿತಿ  ರೈತರ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಬೇಡಿಕೆ ಮುಂದಿಟ್ಟು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರ ನೇತೃತ್ವದಲ್ಲಿ ಸಂಘಟನೆ ಪದಾಧಿಕಾರಿಗಳು ಮತ್ತು ರೈತರು ಪ್ರತಿಭಟನಾ ರ‌್ಯಾಲಿ ನಡೆಸಿದರು.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗೋಶಾಲೆ ಆರಂಭಿಸಬೇಕು, ಮೇವು ಸಂಗ್ರಹಣೆ ಮಾಡಬೇಕು, ಕುಡಿಯುವ ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಎಪಿಎಂಸಿ ಗಂಜ್‌ನಿಂದ ಪ್ರತಿಭಟನಾ ರ‌್ಯಾಲಿ ಆರಂಭಿಸಿ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಬರಗಾಲ ಪರಿಸ್ಥಿತಿ ಇರುವುದರಿಂದ ಮೇವು ಉಚಿತವಾಗಿ ದೊರಕಿಸಬೇಕು, ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರಕಿಸುವ ವ್ಯವಸ್ಥೆ ಮಾಡಬೇಕು, ಬತ್ತ, ಅರಿಷಿಣ, ತೆಂಗು, ಅಡಿಕೆ ಸೇರಿದಂತೆ ಮತ್ತಿತರ ಬೆಳೆಗಳಿಗೆ ಮಾರುಕಟ್ಟೆ ದೊರಕಿಸಬೇಕು ಎಂದು ಆಗ್ರಹಿಸಿದರು.

ಗ್ರಾಮೀಣ ಪ್ರದೇಶಕ್ಕೆ 24 ತಾಸು ವಿದ್ಯುತ್ ಒದಗಿಸಬೇಕು, ಕೃಷಿ ಪಂಪ್‌ಸೆಟ್‌ಗಳಿಗೆ ಗುಣಮಟ್ಟದ ವಿದ್ಯುತ್ ಕಲ್ಪಿಸಬೇಕು, ರೈತ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಒದಗಿಸಬೇಕು ಎಂದು ಆಗ್ರಹಿಸಿದರು.

ಬರಗಾಲ ಸ್ಥಿತಿ, ಮಳೆ ಆಗದೇ ಇರುವುದರಿಂದ ರೈತರು ಹೆಚ್ಚಿನ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಟ್ರ್ಯಾಕ್ಟರ್ ಸಾಲ ಪಡೆದ ರೈತರಿಗೆ ಬ್ಯಾಂಕ್‌ಗಳು ನೋಟಿಸ್ ಕಳುಹಿಸುತ್ತಿದ್ದು, ಕೂಡಲೇ ಈ ಬಗ್ಗೆ ಸರ್ಕಾರ ಗಮನಹರಿಸಿ ಬ್ಯಾಂಕ್‌ಗಳಿಗೆ ನೋಟಿಸ್ ಕಳುಹಿಸದೇ ಇರಲು ಸೂಚಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ಅಮೀನ್ ಪಾಷಾ ದಿದ್ದಿಗಿ, ವೆಂಕಟರೆಡ್ಡಿ, ಬಸವರಾಜ ಮಾಲಿಪಾಟೀಲ್, ವೀರಭದ್ರಪ್ಪ, ಬಸವರಾಜ ಪೂಜಾರಿ, ಜಂಬನಗೌಡ, ಜಾನೇಕಲ್ ಅಮರೇಶ, ಆಲ್ದಾಳ ಬಸವರಾಜ, ದುರುಗಪ್ಪ ಮತ್ತಿತರರು ಇದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.