ADVERTISEMENT

18 ತಾಸು ವಿದ್ಯುತ್‌ಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2011, 8:45 IST
Last Updated 4 ಅಕ್ಟೋಬರ್ 2011, 8:45 IST

ರಾಯಚೂರು: ತಾಲ್ಲೂಕಿನ ಯರಗೇರಾ ಗ್ರಾಮದ ವಿದ್ಯುತ್ ಉಪ ವಿತರಣಾ ಕೇಂದ್ರದ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೋಮವಾರ ಯರಗೇರಾ ಗ್ರಾಮದ ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಯರಗೇರಾ ಗ್ರಾಮದ ವಿದ್ಯುತ್ ಉಪ ವಿತರಣಾ ಕೇಂದ್ರದ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಇಲ್ಲದೇ ರೈತರ ಬೆಳೆಗಳು ಒಣಗುತ್ತಿವೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಯರಗೇರಾ ಗ್ರಾಮದ ವಿದ್ಯುತ್ ಉಪವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳಿಗೆ 18 ತಾಸು ವಿದ್ಯುತ್ ಪೂರೈಕೆ ಮಾಡಬೇಕು. ರೈತರ ಬೆಳೆ ಒಣಗುತ್ತಿದ್ದು, ಇವುಗಳ ಸಮೀಕ್ಷೆ ಮಾಡಿ ರೈತರಿಗೆ ಆಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ವಿದ್ಯುತ್ ಪರಿವರ್ತಕ ಸುಟ್ಟು ಹೋದರೆ ಯಾವುದೇ ರೀತಿಯಲ್ಲಿ ಹಣ ಪಡೆಯದೇ 48 ಗಂಟೆಯೊಳಗಾಗಿ ವಿದ್ಯುತ್ ಪರಿವರ್ತಕ ಅಳವಡಿಸಬೇಕು. ಶಿಥಿಲಾವಸ್ಥೆಯಲ್ಲಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯ ಉಪಾಧ್ಯಕ್ಷ ಚಾಮರಸ್ ಮಾಲಿಪಾಟೀಲ್, ಜಿಲ್ಲಾಧ್ಯಕ್ಷ ಎನ್.ಲಕ್ಷ್ಮಣಗೌಡ ಕಡಗಂದೊಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹಂಪಣ್ಣ ಜಾನೇಕಲ್, ಜಗದೀಶಯ್ಯ ಸ್ವಾಮಿ ಮಲ್ಲಿನ ಮಡಗು, ತಾಲ್ಲೂಕು ಅಧ್ಯಕ್ಷ ನರಸಿಂಗರಾವ್ ಕುಲಕರ್ಣಿ ಚಂದ್ರಬಂಡಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.