ADVERTISEMENT

ರಾಯಚೂರು: ಇ- ಲೋಕ್ ಅದಾಲತ್‍ನಲ್ಲಿ 5,480 ಪ್ರಕರಣಗಳು ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 3:44 IST
Last Updated 23 ಸೆಪ್ಟೆಂಬರ್ 2020, 3:44 IST
ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಲೋಕ್ ಅದಾಲತ್‍ ನಡೆಯಿತು
ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಲೋಕ್ ಅದಾಲತ್‍ ನಡೆಯಿತು   

ರಾಯಚೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜಿಲ್ಲೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಇ- ಲೋಕ್ ಅದಾಲತ್‍ನಲ್ಲಿ 5,480 ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಮುಸ್ತಫಾ ಹುಸೇನ್ ಅವರು ತಿಳಿಸಿದರು.

ಇ-ಮೆಗಾ ಲೋಕ್ ಅದಾಲತ್‍ನಲ್ಲಿ 6,287 ಸಲ್ಲಿಕೆಯಾದ ಅರ್ಜಿಗಳ ಪೈಕಿ 5,480 ವಿವಿಧ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಿ ಒಟ್ಟು ₹ 5.80 ಲಕ್ಷ ರಾಜಿ ಸಂಧಾನದ ಮೊತ್ತವಾಗಿದೆ. ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಜಿಲ್ಲಾ ಪೊಲೀಸ್‌ ಇಲಾಖೆಯ ಸಹಕಾರದಿಂದ 485 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದ್ದು ಕಕ್ಷಿದಾರರಿಂದ ಸಹ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ನ್ಯಾಯಾಧೀಶರು, ವಕೀಲರು, ನ್ಯಾಯಾಂಗ ಇಲಾಖೆಯ ಸಿಬ್ಬಂದಿ ವರ್ಗ ಸಹಕಾರ ನೀಡಿದ್ದಾರೆ. 5,480 ಪ್ರಕರಣಗಳನ್ನು ಇತ್ಯರ್ಥ ಪಡಿಸಿರುವುದರಿಂದ ರಾಜ್ಯದಲ್ಲಿ ಜಿಲ್ಲೆಯು 7ನೇ ಸ್ಥಾನದಲ್ಲಿದೆ. ಶೇ 16.1 ರಷ್ಟು ಸಾಧನೆ ಮಾಡಿದೆ. ಅತಿ ಹೆಚ್ಚಾಗಿ ಕ್ರಿಮಿನಲ್, ರಸ್ತೆ ಅಪಘಾತ, ಚೆಕ್ ಬೌನ್ಸ್ ಮತ್ತು ಜನ್ಮದಿನಾಂಕ ಪ್ರಮಾಣ ಪತ್ರಗಳಿಗೆ ಸಂಬಂಧಿಸಿ ಕಕ್ಷಿದಾರರಿಗೆ ನ್ಯಾಯ ಒದಗಿಸಲಾಗಿದೆ.

ADVERTISEMENT

ಡಿ. 12ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು ದೇಶದಲ್ಲಿ ಏಕಾಏಕಾಲಕ್ಕೆ ನಡೆಯಲಿದೆ ಎಂದು ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಸಿ.ನಾಡಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.