ADVERTISEMENT

ಮಹಾತ್ಮರ ಮೌಲಿಕ ವಿಚಾರ ಬಿತ್ತರಿಸಲು ವಿಶೇಷ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2024, 16:08 IST
Last Updated 6 ಫೆಬ್ರುವರಿ 2024, 16:08 IST
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾಯಕ ಶರಣರ ಜಯಂತಿ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಕೆ.ಆರ್. ದುರುಗೇಶ ಮಾತನಾಡಿದರು
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾಯಕ ಶರಣರ ಜಯಂತಿ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಕೆ.ಆರ್. ದುರುಗೇಶ ಮಾತನಾಡಿದರು   

ರಾಯಚೂರು: ‘ಮಹಾತ್ಮರ ಮೌಲಿಕ ವಿಚಾರಗಳನ್ನು ಬಿತ್ತರಿಸುವ ದಿಸೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಕೆ.ಆರ್.ದುರುಗೇಶ ಹೇಳಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಕಾಯಕ ಶರಣರ ಜಯಂತಿ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಅಧಿಕಾರಿಗಳು ಜಯಂತಿಯ ಪೂರ್ವ ಸಿದ್ಧತೆ ಮಾಡಿಕೊಂಡು ಎಲ್ಲ ಗಣ್ಯರಿಗೆ ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಆಹ್ವಾನ ನೀಡಬೇಕು’ ಎಂದು ತಿಳಿಸಿದರು.

ADVERTISEMENT

‘ಕಾರ್ಯಕ್ರಮದ ದಿನ ಬೆಳಿಗ್ಗೆ 9 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಿಂದ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗ ಮಂದಿರದವರೆಗೆ ಕಾಯಕ ಶರಣರ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಕಲಾ ತಂಡಗಳು ಮೆರವಣಿಗೆಗೆ ಮೆರುಗು ತುಂಬಲಿವೆ’ ಎಂದರು.

‘ಬೆಳಿಗ್ಗೆ 11 ಗಂಟೆಗೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ನೈರ್ಮಲ್ಯ ಕಾಪಾಡಲು ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆ ಅಧಿಕಾರಿಗಳು ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ಸೇವಾಲಾಲ್, ಸವಿತಾ ಮಹರ್ಷಿ, ಛತ್ರಪತಿ ಶಿವಾಜಿ ಮಹಾರಾಜ, ಸರ್ವಜ್ಞ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ವೆಂ.ನಾಯಕ, ನಗರಸಭೆ ಅಧಿಕಾರಿ ಶಕಿಲ್, ಶಿಕ್ಷಣ ಇಲಾಖೆಯ ಅಧಿಕಾರಿ ಪರಶುರಾಮ, ಹಿರಿಯ ಸಾಹಿತಿ ವೀರಹನುಮಾನ, ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.