
ಸಿರವಾರ: ‘ಸಮಯ ಪಾಲನೆ ಮಾಡದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸೇರಿ ವಿವಿಧ ಸರ್ಕಾರಿ ಕಚೇರಿಗಳಿಗೆ ಶನಿವಾರ ಭೇಟಿ ನೀಡಿದ ಅವರು ಕಚೇರಿ ಸಮಯ ಮೀರಿದ್ದರೂ ಕೆಲಸಕ್ಕೆ ಹಾಜರಾಗದ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ತಾ.ಪಂ ಇಒ ಆರೋಗ್ಯದಲ್ಲಿ ಏರುಪೇರು: ಜಿ.ಪಂ ಸಿಇಒ ಈಶ್ವರಕುಮಾರ ಕಾಂದೂ ಅವರು ತಾಲ್ಲೂಕು ಪಂಚಾಯಿತಿ ಕಚೇರಿಗೆ ಶನಿವಾರ ಬೆಳಿಗ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಒ ಶಶಿಧರಸ್ವಾಮಿ ಅವರು ಬಂದಿರಲಿಲ್ಲ. ಇಒ ಬರುವವರೆಗೂ ಸಿಇಒ ಅವರು ಕಚೇರಿಯಲ್ಲಿ ಕಾದು ಕುಳಿತಿದ್ದರು. ತಡವಾಗಿ ಬಂದ ಇಒ ಅವರನ್ನು ಸಿಇಒ ತರಾಟೆಗೆ ತೆಗೆದುಕೊಂಡರು. ಇದರಿಂದ ಗಾಬರಿಗೊಂಡ ಇಒ ಏಕಾಏಕಿ ಕುಸಿದು ಬಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.
ಪಂಚ ಗ್ಯಾರಂಟಿ ಸಭೆ ರದ್ದು: ತಾ.ಪಂ.ಕಚೇರಿಯಲ್ಲಿ ಶನಿವಾರ ಇಒ ನೇತೃತ್ವದಲ್ಲಿ ನಡೆಯಬೇಕಾಗಿದ್ದ ಪಂಚ ಗ್ಯಾರಂಟಿ ಯೋಜನೆಯ ತಾಲ್ಲೂಕುಮಟ್ಟದ ಸಭೆಯನ್ನು ರದ್ದುಪಡಿಸಲಾಯಿತು.
ಕಚೇರಿ ಸಮಯಕ್ಕೆ ಸರಿಯಾಗಿ ಹಾಜರಾಗದ ಇತರ ಅಧಿಕಾರಿಗಳಿಗೆ ನೋಡಿಸ್ ಜಾರಿ ಮಾಡಿ ಕ್ರಮ ಕೈಗೊಳ್ಳಿ ಎಂದು ಸಿಇಒ ಸೂಚಿಸಿದರು.
ನವಲಕಲ್ಲು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ ಕಾಂದೂ ಅವರು ಕಡತಗಳನ್ನು ಪರಿಶೀಲಿಸಿದರು. ಬಳಿಕ ನರೇಗಾ ಕಾಮಗಾರಿ ಸ್ಥಳಕ್ಕೆ ತೆರಳಿ ವೀಕ್ಷಿಸಿದರು. ಅರೆ ಬರೆ ಕೆಲಸ ಹಾಗೂ ಹಾಜರಾತಿ ಸಮರ್ಪಕವಾಗಿ ಇಲ್ಲದಿರುವುದನ್ನು ಗಮನಿಸಿ,‘ಕೂಡಲೇ ಸರಿಪಡಿಸಿಕೊಳ್ಳದಿದ್ದರೆ ಪಿಡಿಒ ಮತ್ತು ಸಿಬ್ಬಂದಿಯನ್ನು ಅಮಾನತು ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಅಂಗನವಾಡಿ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಸೂಚನೆ: ನವಲಕಲ್ಲು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಕೇಂದ್ರದಲ್ಲಿ ಮಕ್ಕಳಿಗೆ ನೀಡುವ ಆಹಾರದ ಮಾಹಿತಿ ಫಲಕ ಇಲ್ಲದಿರುವುದು, ಮಕ್ಕಳಿಗೆ ಬೆಳಿಗ್ಗೆ ನೀಡಿದ ಆಹಾರದ ಮಾದರಿ ಇಲ್ಲದಿರುವುದು, ಮಕ್ಕಳು ಇಲ್ಲದಿದ್ದರೂ ಹಾಜರಿ ಹಾಕಿರುವುದನ್ನು ಗಮನಿಸಿದರು.
ಅಂಗನವಾಡಿ ಕೇಂದ್ರಗಳಿಗೆ ನೀವು ಸರಿಯಾಗಿ ಭೇಟಿ ನೀಡುವುದಿಲ್ಲ ಎಂದು ಸಿಡಿಪಿಒ ಎಂ.ಡಿ.ಗೋಕುಲ್ ಅವರನ್ನು ತರಾಟೆಗೆ ತೆಗೆದುಕೊಂಡು ಕೂಡಲೇ ಅಂಗನವಾಡಿ ಸಿಬ್ಬಂದಿ ವಿರುದ್ದ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.