ADVERTISEMENT

ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಕಡ್ಡಾಯ ಲಸಿಕೆ ನೀಡಿ: ಎಡಿಸಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 15:28 IST
Last Updated 12 ಜನವರಿ 2022, 15:28 IST
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್‌.ದುರುಗೇಶ್‌ ಅವರ ಅಧ್ಯಕ್ಷತೆಯಲ್ಲಿ ಕೋವಿಡ್‌ 3ನೇ ಅಲೆ ನಿಯಂತ್ರಣದ ಕ್ರಮಗಳ ಕುರಿತು ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್‌.ದುರುಗೇಶ್‌ ಅವರ ಅಧ್ಯಕ್ಷತೆಯಲ್ಲಿ ಕೋವಿಡ್‌ 3ನೇ ಅಲೆ ನಿಯಂತ್ರಣದ ಕ್ರಮಗಳ ಕುರಿತು ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು   

ರಾಯಚೂರು: ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿ 15 ವರ್ಷದಿಂದ 18 ವರ್ಷದ ವಯೋಮಾನದ ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ನೀಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಬುಧವಾರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕಾಗಿ ಮುನ್ನೆಚರಿಕಾ ಕ್ರಮಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊರೊನಾ ರೂಪಾಂತರ ತಳಿ ಓಮೈಕ್ರಾನ್ ವೈರಸ್ ಎಲ್ಲೆಡೆ ಹರಡುತ್ತಿದೆ. ಮೂರನೇ ಅಲೆ ಬರದಂತೆ ನಾವು ತಡೆಯಲು ಲಸಿಕಾಕರಣವೊಂದೇ ಅಸ್ತ್ರವಾಗಿದೆ. ಎಲ್ಲ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಜಾಗೃತ ವಹಿಸಿ, ತಪ್ಪದೇ ಲಸಿಕೆ ಹಾಕಿಸಿಕೊಳ್ಳಲು ಮನಚಲಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಿಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

ಕೋವಿಡ್ ಮೂರನೇ ಅಲೆ ವ್ಯಾಪಕವಾಗಿ ಹರಡುವ ಭೀತಿ ಎದುರಾಗಿದ್ದು, ಅಧಿಕಾರಿಗಳು ಮುಂಜಾಗೃತಾ ಕ್ರಮವಾಗಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್‌ಗಳ ಹಾಗೂ ಆಕ್ಸಿಜನ್ ಕೊರತೆಯಾಗದಂತೆ ನಿಗಾವಹಿಸಿ ಕಾರ್ಯ ನಿರ್ವಹಿಸಬೇಕು ಎಂದರು.

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಆಕ್ಸಿಜನ್ ಸಿಲೆಂಡರ್‌ಳಿದ್ದು, ಅವುಗಳ ಉಪಯೋಗವನ್ನು ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಆಕ್ಸಿಜನ್ ಕೊರತೆಯಾಗದಂತೆ ಜಾಗರೂಕತೆಯಿಂದ ಕೋವಿಡ್ ನಿಯಂತ್ರಿಸಲು ಶ್ರಮವಹಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಹಾಕುವಲ್ಲಿ ಹಿಂದೆ ಉಳಿದಿದ್ದು, ಮೊದಲನೇ ಡೋಸ್ ಉತ್ತಮ ರೀತಿಯಲ್ಲಿ ಪೂರ್ಣವಾಗಿತ್ತು. ಆದರೆ ಎರಡನೇ ಡೋಸ್ ನೀಡುವಲ್ಲಿ ಆಮೆಗತಿಯಲ್ಲಿ ಸಾಧಿಸುತ್ತಿದ್ದು, ಎರಡನೇ ಡೋಸ್ ಹಾಕಿಸುವಲ್ಲಿ ಅಧಿಕಾರಿಗಳು ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ರಾಯಚೂರು ಉಪವಿಭಾಗಾಧಿಕಾರಿ ರಜಿನಿಕಾಂತ್ ಚೌವಾಣ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇ.ಎಸ್.ವೀರಭದ್ರಯ್ಯ, ತಹಶೀಲ್ದಾರ್ ಡಾ.ಹಂಪಣ್ಣ ಸಜ್ಜನ್,ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಸುರೇಂದ್ರಬಾಬು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ರಾಮಪ್ಪ, ಜಿಲ್ಲಾ ಅಲ್ಪಸಂಖ್ಯಾತರಕಲ್ಯಾಣ ಇಲಾಖೆಯ ಅಧಿಕಾರಿ ಶೇಖ್ ಅಲಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ವಿಜಯ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.