ADVERTISEMENT

ಏಮ್ಸ್‌ಗಾಗಿ ಬೃಹತ್ ಪ್ರತಿಭಟನಾ ರ‍್ಯಾಲಿ

ಬೇಡಿಕೆಗೆ ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ಧ ಹೋರಾಟಗಾರರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 13:34 IST
Last Updated 28 ನವೆಂಬರ್ 2022, 13:34 IST
ರಾಯಚೂರು ಏಮ್ಸ್ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ 200 ದಿನ ಪೂರೈಸಿದ ಹಿನ್ನೆಲೆಯಲ್ಲಿ ಏಮ್ಸ್ ಹೋರಾಟ ಸಮಿತಿಯ ಪದಾಧಿಕಾರಿಗಳು ರಾಯಚೂರಿನ ಮಹಾವೀರ್ ವೃತ್ತದ ಬಳಿ ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಾಯಚೂರು ಏಮ್ಸ್ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ 200 ದಿನ ಪೂರೈಸಿದ ಹಿನ್ನೆಲೆಯಲ್ಲಿ ಏಮ್ಸ್ ಹೋರಾಟ ಸಮಿತಿಯ ಪದಾಧಿಕಾರಿಗಳು ರಾಯಚೂರಿನ ಮಹಾವೀರ್ ವೃತ್ತದ ಬಳಿ ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.   

ರಾಯಚೂರು: ಕೇಂದ್ರ ಸರ್ಕಾರದಿಂದ ಮಂಜೂರಾದ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ರಾಯಚೂರಿನಲ್ಲಿಯೇ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿ ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿಯ ನೇತೃತ್ವದಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು.

ನಗರದ ಕರ್ನಾಟಕ ಸಂಘದ ಕಚೇರಿಯಲ್ಲಿ ಸಾಹಿತಿ ವೀರ ಹನುಮಾನ ಅವರು ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಕರ್ನಾಟಕ ಸಂಘದಿಂದ ಹನುಮಾನ ಟಾಕೀಸ್, ನೇತಾಜಿ ವೃತ್ತ, ಮಹಾವೀರ್ ವೃತ್ತದ ಮಾರ್ಗವಾಗಿ ಜಿಲ್ಲಾ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಿತು.

ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ ಬೇಡಿಕೆ ಕುರಿತು ಸಾರ್ವಜನಿಕರ ಗಮನ ಸೆಳೆಯಲಾಯಿತು. ಏಮ್ಸ್ ಮಂಜೂರಾತಿಗೆ ರಾಜ್ಯ ಸರ್ಕಾರ ನಿಷ್ಕಾಳಜಿ ವಹಿಸಿದ್ದು ಜಿಲ್ಲೆಯ ಜನಪ್ರತಿನಿಧಿಗಳು ಒಗ್ಗಟ್ಟು ಪ್ರದರ್ಶಿಸಿ ಶಕ್ತಿ ಸಾಮರ್ಥ್ಯ ತೋರಿಸುತ್ತಿಲ್ಲ. ಎಲ್ಲ ಜನಪ್ರತಿನಿಧಿಗಳ ಒಟ್ಟಾಗಿ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿದರು.

ADVERTISEMENT

ಮಹಾತ್ಮಗಾಂಧಿ ಕ್ರೀಡಾಂಗಣದ ಬಳಿ ಕಳೆದ 200 ದಿನಗಳಿಂದ ಅನಿರ್ಧಿಷ್ಠಾವಧಿ ಧರಣಿ ನಡೆಯುತ್ತಿದ್ದು ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಹೋರಾಟದ ಮುಂದುವರೆದ ಭಾಗವಾಗಿ ಪ್ರತಿಭಟನೆ ನಡೆಯಿತು.

ಏಮ್ಸ್ ಹೋರಾಟ ಸಮಿತಿಯ ಸಂಚಾಲಕ ಬಸವರಾಜ ಕಳಸ, ಅಶೋಕ ಕುಮಾರ ಸಿ ಕೆ ಜೈನ್, ಎನ್.ಮಹಾವೀರ, ಸಾಧಿಕ್ ಖಾನ್, ವೆಂಕಟೇಶ ಆಚಾರಿ, ಮಹೇಂದ್ರಸಿಂಗ್, ಪ್ರಸಾದ್ ಭಂಡಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.