ADVERTISEMENT

ಫೆ.5ರಂದು ಅಖಿಲ ಭಾರತ ಶಿಕ್ಷಕರ ಜಂಟಿ ಕ್ರಿಯಾ ಸಮಿತಿಯಿಂದ ದೆಹಲಿ ಚಲೋ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2026, 5:32 IST
Last Updated 4 ಫೆಬ್ರುವರಿ 2026, 5:32 IST
ನೂರುದ್ದೀನ್ 
ನೂರುದ್ದೀನ್    

ಸಿಂಧನೂರು: ಶಿಕ್ಷಕ ಸಮುದಾಯ ಎದುರಿಸುತ್ತಿರುವ ದೀರ್ಘಕಾಲದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಶಿಕ್ಷಕರ ಜಂಟಿ ಕ್ರಿಯಾ ಸಮಿತಿ ಫೆಬ್ರುವರಿ 5ರಂದು ದೆಹಲಿ ಚಲೋ ಹೋರಾಟ ಹಮ್ಮಿಕೊಂಡಿದೆ. ಈ ಬೃಹತ್ ಚಳವಳಿಗೆ ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಸಂಪೂರ್ಣ ಬೆಂಬಲ ನೀಡಿದೆ’ ಎಂದು ಐಟಾ ತಾಲ್ಲೂಕು ಘಟಕದ ಅಧ್ಯಕ್ಷ ನೂರುದ್ದೀನ್ ತಿಳಿಸಿದ್ದಾರೆ.

ಮಂಗಳವಾರ ಹೇಳಿಕೆ ನೀಡಿರುವ ಅವರು,‘ಪ್ರಾಥಮಿಕ ಶಾಲೆಯಿಂದ ವಿಶ್ವವಿದ್ಯಾಲಯ ಮಟ್ಟದವರೆಗೆ ವಿವಿಧ ಶಿಕ್ಷಕ ಸಂಘಟನೆಗಳು ಒಗ್ಗೂಡಿ ಅಖಿಲ ಭಾರತ ಶಿಕ್ಷಕರ ಜಂಟಿ ಕ್ರಿಯಾ ಸಮಿತಿ ರಚಿಸಿಕೊಂಡಿದ್ದು, ಅದರ ನೇತೃತ್ವದಲ್ಲಿ ಫೆ.5ರಂದು ಬೆಳಿಗ್ಗೆ 10 ಗಂಟೆಯಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಯಲಿದೆ. ಪ್ರಸ್ತುತ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು. ಸೇವೆಯಲ್ಲಿರುವ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆಯಿಂದ ವಿನಾಯಿತಿ ನೀಡಬೇಕು. ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಮತದಾನದ ಹಕ್ಕು ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

8ನೇ ವೇತನ ಆಯೋಗದ ವರದಿಯನ್ನು ನಿಗದಿತ ಅವಧಿಯಲ್ಲಿ ಜಾರಿಗೊಳಿಸಬೇಕು. ದೇಶದಾದ್ಯಂತ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಅತಿಥಿ ಮತ್ತು ಗುತ್ತಿಗೆ ಶಿಕ್ಷಕರನ್ನು ಕಾಯಂಗೊಳಿಸಿ ಕನಿಷ್ಠ ವೇತನ ನಿಗದಿಪಡಿಸಬೇಕು. ನೂತನ ಶಿಕ್ಷಣ ನೀತಿಯಲ್ಲಿರುವ ವಿದ್ಯಾರ್ಥಿ ಮತ್ತು ಶಿಕ್ಷಕ ವಿರೋಧಿ ಅಂಶಗಳನ್ನು ಕೈಬಿಡಬೇಕು. ಸರ್ಕಾರಿ ಶಾಲೆಗಳ ವಿಲೀನ ಅಥವಾ ಮುಚ್ಚುವ ಪ್ರಕ್ರಿಯೆ ನಿಲ್ಲಿಸಬೇಕು ಹಾಗೂ ಶಿಕ್ಷಕರನ್ನು ಬೋಧಕೇತರ ಕೆಲಸಗಳಿಂದ ಮುಕ್ತಗೊಳಿಸಬೇಕು ಎಂಬ ಬೇಡಿಕೆಗಳನ್ನೂ ಹೋರಾಟದಲ್ಲಿ ಮುಂದಿಡಲಾಗಿದೆ. ಈ ಮಹತ್ವದ ದೆಹಲಿ ಚಲೋ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸಬೇಕು ಎಂದು ಕೋರಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.