ADVERTISEMENT

ಪಿಎಂಎವೈ ಮನೆ ನಿರ್ಮಾಣ ನಿರ್ಲಕ್ಷ್ಯ ಆರೋಪ

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2019, 13:44 IST
Last Updated 13 ಏಪ್ರಿಲ್ 2019, 13:44 IST
ರಾಯಚೂರಿನಲ್ಲಿ ಶನಿವಾರ ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಮಂಜೂರಾದ ಮನೆಗಳನ್ನು ನಿರ್ಮಿಸದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು
ರಾಯಚೂರಿನಲ್ಲಿ ಶನಿವಾರ ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಮಂಜೂರಾದ ಮನೆಗಳನ್ನು ನಿರ್ಮಿಸದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು   

ರಾಯಚೂರು: ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಮಂಜೂರಾದ ಮನೆಗಳನ್ನು ನಿರ್ಮಿಸದೇನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸದಸ್ಯರು ನಗರದ ಟಿಪ್ಪು ಸುಲ್ತಾನ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಹಲವು ವರ್ಷಗಳಿಂದ ಅಭಿವೃದ್ಧಿ ಹೊಂದದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಹಣ ಬಿಡುಗಡೆ ಮಾಡಿ, ಮನೆಗಳನ್ನು ನಿರ್ಮಿಸಲು ಸೂಚಿಸಿದೆ. ಆದರೆ, ಕೊಳಚೆ ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಅಭಿವೃದ್ಧಿ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದು, ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

2016-17ನಲ್ಲಿ 1050 ಮನೆಗಳು ಮಂಜೂರಾಗಿವೆ. ಪ್ರತಿ ಮನೆಗೆ ₨3.80 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಆದರೆ, ಮನೆಗಳನ್ನು ನಿರ್ಮಿಸಿದೇ ಫಲಾನುಭವಿಗಳಿಗೆ ಇಂತಿಷ್ಟು ಹಣ ನೀಡಿ ಕೈ ತೊಳೆದುಕೊಂಡಿದ್ದಾರೆ. ಅಧಿಕಾರಿಗಳು ಕೂಡ ಈ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ದೂರಿದರು.

ADVERTISEMENT

ಆದ್ದರಿಂದ ನಿರ್ಲಕ್ಷ್ಯ ಧೋರಣೆ ತಾಳಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಪ್ರಧಾನಮಂತ್ರಿ ಆವಾಸ ಯೋಜನೆಯಡಿ ನಡೆದಿರುವ ಅವ್ಯವಹಾರ ತನಿಖೆ ನಡೆಸಬೇಕು. ಯೋಜನೆಯಡಿ ಆಯ್ಕೆಯಾದ ಎಲ್ಲ ಫಲಾನುಭವಿಗಳಿಗೆ ನಿಗದಿಯಾದ ಮೊತ್ತ ನೀಡಬೇಕು ಎಂದು ಒತ್ತಾಯಿಸಿದರು.

ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಪ್ರತೀವರ್ಷ ಅನುದಾನ ನೀಡುತ್ತಿದೆ. ಆದರೆ, ಕೊಳಚೆ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಗಂಭೀರವಾಗಿದ್ದು, ಈ ಪ್ರದೇಶಗಳು ಅಭಿವೃದ್ಧಿಯಿಂದ ವಂಚಿತಗೊಂಡಿವೆ. ಎಲ್‌ಬಿಎಸ್‌ ನಗರಕ್ಕೆ 250 ಮನೆಗಳು ಮಂಜೂರಾಗಿದ್ದು, ಈ ಮನೆಗಳನ್ನು ನಿರ್ಮಿಸಲು ಗುತ್ತಿಗೆದಾರರಿಗೆ ಗುತ್ತಿಗೆ ನೀಡಲಾಗಿದೆ. ಆದರೆ, ಗುತ್ತಿಗೆದಾರರು ಮನೆಗಳ ನಿರ್ಮಾಣ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟ ಸಮಿತಿ ಪ್ರಮುಖರಾದ ಕುಮಾರ ಸಮತಳ, ಎನ್.ಪಧ್ಮವರ್ಧನ್, ಶಿವರಾಜ ಗಂಟೆ, ಮಾರೆಪ್ಪ ಹರವಿ, ಸರಸ್ವತಿ, ರಾಮರೆಡ್ಡಿ, ಲಕ್ಷ್ಮೀ, ಆಂಜನೇಯ, ಕೇಶವಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.