
ರಾಯಚೂರು: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ದೇಶ ಕಂಡ ಅತ್ಯಂತ ಅಪರೂಪದ ಮಹಾನಾಯಕರು ಹಾಗೂ ಸಮಾನತೆಯ ಹರಿಕಾರರಾಗಿದ್ದಾರೆ’ ಎಂದು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಬಣ್ಣಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಡಾ.ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ನಡೆದ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
‘ಬಾಬಾಸಾಹೇಬರು ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿದ್ದರು. ಹಲವು ಧರ್ಮಗ್ರಂಥ, ಹಲವು ರಾಷ್ಟ್ರಗಳ ಸಂವಿಧಾನಗಳ ಅಧ್ಯಯನ ಮಾಡಿ ದೇಶದ ಸರ್ವ ಜಾತಿ ಸಮುದಾಯ ಹಾಗೂ ಧರ್ಮದವರಿಗೂ ಸಾಮಾಜಿಕ ನ್ಯಾಯ ಒದಗಿಸಿಕೊಡುವಂಥ ಸಂವಿಧಾನ ಬರೆದು ರಾಷ್ಟ್ರದ ಹಿರಿಮೆಯನ್ನು ಹೆಚ್ಚಿಸಿದ್ದಾರೆ‘ ಎಂದರು.
‘ಅಂಬೇಡ್ಕರ್ ಅವರು ತಮ್ಮ ಬದುಕಿನ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು ಸಹ ನಾನು ಹುಟ್ಟುವಾಗ ಹಿಂದೂವಾಗಿದ್ದೆ, ಆದರೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದು ನೊಂದು ನುಡಿದಿದ್ದರು. ಅವರ ಪರಿಶ್ರಮದ ಫಲವಾಗಿ ಶೋಷಿತ ಸಮುದಾಯಗಳು ಇಂದು ಸಮಾಜದಲ್ಲಿ ಗೌರವದಿಂದ ಬಾಳಲು ಸಾಧ್ಯವಾಗಿದೆ‘ ಎಂದು ತಿಳಿಸಿದರು.
‘ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸುವಂತೆ ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿಯಾಗಿದ್ದಾರೆ‘ ಎಂದು ಟೀಕಿಸಿದರು.
ಗಣ್ಯರಿಂದ ಪುಷ್ಪ ನಮನ:
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಬೀದರ್ ಜಿಲ್ಲೆಯ ಬೌದ್ಧ ಧರ್ಮ ಗುರು ಬಂತೇಜಿ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಪಾತ್ರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿಂಧೂ ರಘು. ಎಚ್.ಎಸ್, ಪರಿಶಿಷ್ಟ ಕಲ್ಯಾಣ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ಶಿವಪ್ಪ, ಪರಿಶಿಷ್ಟ ಕಲ್ಯಾಣ ವರ್ಗಗಳ ತಾಲ್ಲೂಕು ಕಲ್ಯಾಣಾಧಿಕಾರಿ ರುಕ್ಮಿಣಿಬಾಯಿ, ಸಮಾಜ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕ ರವಿ ಎಂ. ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿ, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.