
ಮಸ್ಕಿ: ಪಟ್ಟಣದಲ್ಲಿ ಇತ್ತೀಚಿನ ದಿನಗಳಲ್ಲಿ ಅನಧಿಕೃತ ಬ್ಯಾನರ್‌ಗಳ ಹಾವಳಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ.
ರಾಜಕೀಯ ಕಾರ್ಯಕ್ರಮಗಳು, ಶುಭಾಶಯಗಳು, ಜನ್ಮದಿನ–ವಾರ್ಷಿಕೋತ್ಸವಗಳು ಹಾಗೂ ವಿವಿಧ ಸಂಘಟನೆಗಳ ಪ್ರಚಾರದ ನೆಪದಲ್ಲಿ ರಸ್ತೆ ಬದಿಗಳು, ವೃತ್ತಗಳು, ವಿದ್ಯುತ್ ಕಂಬಗಳು, ರಸ್ತೆ ಬದಿಯ ಡಿವೈಡರ್ ಗ್ರಿಲ್‌ಗಳಿಗೆ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ.
ಈ ಬ್ಯಾನರ್‌ಗಳಿಂದ ಪಟ್ಟಣದ ಸೌಂದರ್ಯಕ್ಕೆ ಧಕ್ಕೆಯಾಗುವುದರ ಜೊತೆಗೆ ಸಂಚಾರಕ್ಕೂ ತೀವ್ರ ಅಡಚಣೆ ಉಂಟಾಗಿದೆ. ಕೆಲವು ಕಡೆಗಳಲ್ಲಿ ಬ್ಯಾನರ್‌ಗಳು ರಸ್ತೆ ಮೇಲೆಯೇ ತೂಗಾಡುತ್ತಿದ್ದು, ವಾಹನ ಸವಾರರಿಗೆ ಅಪಾಯಕಾರಿಯಾಗಿವೆ. ಬ್ಯಾನರ್‌ಗಳು ಕಿತ್ತು ಬಿದ್ದರೆ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಪುರಸಭೆ ಪೂರ್ವಾನುಮತಿ ಗಾಳಿಗೆ ತೂರಿ ಬ್ಯಾನರ್ ಅಳವಡಿಸುವುದು ನಿಯಮಬಾಹಿರವಾಗಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ. ಹಿಂದೆಯೂ ಅನಧಿಕೃತ ಬ್ಯಾನರ್ ತೆರವುಗೊಳಿಸುವ ಅಭಿಯಾನ ನಡೆದಿದ್ದರೂ, ಸಮಸ್ಯೆ ಮರುಕಳಿಸುತ್ತಿರುವುದು ಅಧಿಕಾರಿಗಳ ನಿರ್ಲಕ್ಷ್ಯದ ಫಲವೆಂಬ ಆರೋಪಗಳು ಕೇಳಿಬರುತ್ತಿವೆ.
ಪಟ್ಟಣದ ಸ್ವಚ್ಛತೆ, ಸೌಂದರ್ಯ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವುದರ ಜೊತೆಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.