ADVERTISEMENT

ನೀರಿನ ಸಮಸ್ಯೆ ಆಗದಂತೆ ನಿಗಾ ವಹಿಸಿ

ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2019, 12:44 IST
Last Updated 11 ಫೆಬ್ರುವರಿ 2019, 12:44 IST
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು   

ರಾಯಚೂರು: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಿ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಪರಮೇಶಪ್ಪ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಯಾವ ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಎಂಬುದರ ಮಾಹಿತಿ ಪಡೆದುಕೊಳ್ಳಬೇಕು. ಸದ್ಯಕ್ಕೆ ಒಂಭತ್ತು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂಬುದು ಗೊತ್ತಾಗಿದೆ. ಬೇಸಿಗೆ ಕಾಲ ಸಮಿಪಿಸುತ್ತಿದ್ದು ಜನರಿಗೆ ಟ್ಯಾಂಕರ್ ಮೂಲಕ ಅಥವಾ ಆಯಾ ಹಳ್ಳಿಗಳ ಗ್ರಾಮಸ್ಥರ ಸಲಹೆಗಳನ್ನು ಪಡೆದುಕೊಂಡು ಬೋರ್‌ವೆಲ್ ವ್ಯವಸ್ಥೆಗೊಳಿಸಿ ಜನರಿಗೆ ನೀರು ಒದಗಿಸುವಂತೆ ಮಾಡಬೇಕು. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ನೀಗಾ ವಹಿಸಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಯಾವುದೇ ಇಲಾಖೆ ಅಧಿಕಾರಿಗಳು ಸಭೆಗೆ ಬರುವ ಮುನ್ನ ದಾಖಲೆಗಳ ಸಮೇತ ಹಾಜರಾಗಿ ಸರಿಯಾದ ಮಾಹಿತಿಯನ್ನು ನೀಡಬೇಕು. ಮಾಸಿಕ ಕೆಡಿಪಿ ಸಭೆಯಲ್ಲಿ ಗೈರು ಹಾಜರಿಯಾದ ಅಧಿಕಾರಿಗಳ ವಿರುದ್ಧ ನೋಟಿಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸರ್ಕಾರದ ವಿವಿಧ ಇಲಾಖೆಗಳ ನಿಗದಿಯಂತೆ ಭೌತಿಕ ಗುರಿ ಸಾಧಿಸಬೇಕು. ಪ್ರಸಕ್ತ ವರ್ಷದ ಅಂತ್ಯದೊಳಗೆ ಗುರಿ ಸಾಧಿಸುವತ್ತ ಎಲ್ಲಾ ಅಧಿಕಾರಿಗಳು ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಲೋಕಸಭೆ ಚುನಾವಣೆ ಸಮೀಸುತ್ತಿರಿವುದರಿಂದ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪ್ರತಿ ವಾರದಲ್ಲಿ ಎರಡು ಬಾರಿ ಆಯಾ ಇಲಾಖೆಗಳಲ್ಲಿ ಮತದಾರರ ಜಾಗೃತಿ ಜಾಥಾ, ಘೋಷಣೆ, ಪ್ರತಿಜ್ಞಾ ವಿಧಿ ಕಾರ್ಯಕ್ರಮ ಮಾಡಿ ನಂತರ ವರದಿಯನ್ನು ಜಿಲ್ಲಾಡಳಿತಕ್ಕೆ ಹಾಗೂ ವಾರ್ತಾ ಇಲಾಖೆಯ ವಿಳಾಸಕ್ಕೆ ಮಾಹಿತಿ ಜೊತಗೆ ಪೋಟೋಗಳನ್ನು ಕಳುಹಿಸಿ ಪತ್ರಿಕೆಗಳ ಮುಖಾಂತರ ಮತದಾನದ ಅರಿವು ಮೂಡಿಸಬೇಕು. ಒಂದು ವೇಳೆ ನಿರ್ಲಕ್ಷ್ಯವಹಿಸಿದರೇ ಅಂತಹ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ ಕ್ರಮ ಜರುಗಿಸಲಾಗುವುದೆಂದು ಯೋಜನಾಧಿಕಾರಿ ಡಾ.ರೋಣಿ ತಿಳಿಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ವರದಿಯನ್ನು ಮಂಡಿಸಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗೀತಾ ಕರಿಯಪ್ಪ ವಜ್ಜಲ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಹ್ಮದ್ ಯೂಸೂಪ್, ಜಿಲ್ಲಾ ಯೋಜನಾಧಿಕಾರಿ ಡಾ. ರೋಣಿ, ಜಿಲ್ಲಾ ಯೋಜನಾ ನಿರ್ದೇಶಕ ಕೆ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.