
ರಾಯಚೂರು: ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅಸಭ್ಯ ರೀತಿಯಲ್ಲಿ ವರ್ತಿಸಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಇಲ್ಲಿನ ಗಂಜ್ ಸರ್ಕಲ್‌ನಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ನಗರದ ಶಾಸಕ ಡಾ. ಶಿವರಾಜ ಪಾಟೀಲ ಹಾಗೂ ಜಿಲ್ಲಾ ಯುವ ಮೋರ್ದ ವಿನಾಯಾಕ ರಾವ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಗಂಜ್ ಸರ್ಕಲ್ ಸಮೀಪದಲ್ಲೇ ಇರುವ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಪೊಲೀಸರು ತಡೆದರು.
ನಂತರ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂತೋಷ ರಾಜಗುರು, ರವೀಂದ್ರ ಜಲ್ದಾರ್, ಸಿದ್ದನಗೌಡ ನೆಲಹಾಳ, ರಾಘವೇಂದ್ರ ಉಟ್ಕೂರು, ಪಿ.ಯಲ್ಲಪ್ಪ, ಜಿ.ವಿಜಯರಾಜೆಶ್ವರಿ, ಶರಣಮ್ಮ ಕಾಮರೆಡ್ಡಿ, ಸುಲೊಚನಾ ನಾಗವೇಣಿ, ಆಂಜನೇಯ ಕಡಗೊಲ, ನಗರಾಜ, ನರಸರೆಡ್ಡಿ, ಯಲ್ಲಪ್ಪ ಫಿರಂಗಿ, ಭೀಮರೆಡ್ಡಿ, ಶಿವಕುಮಾರ ಪೊಲೀಸ್ ಪಾಟೀಲ, ರವಿ ಮೀರಪುರ, ಕಾರ್ತೀಕ ರೆಡ್ಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದರು. ಕೆಲ ಹೊತ್ತು ವಾಹನಗಳ ಸಂಚಾರಕ್ಕೆ ತಡೆ ಉಂಟಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.