ADVERTISEMENT

ವಿದ್ಯಾರ್ಥಿ ವೇತನ ರದ್ದು: ಸಿಪಿಐಎಂಎಲ್ ರೆಡ್‍ಸ್ಟಾರ್ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 12:27 IST
Last Updated 2 ಡಿಸೆಂಬರ್ 2022, 12:27 IST
ಎಂ.ಗಂಗಾಧರ್
ಎಂ.ಗಂಗಾಧರ್   

ಸಿಂಧನೂರು: ಒಂದನೇ ತರಗತಿಯಿಂದ 8ನೇ ತರಗತಿಯವರೆಗೆ ಹಿಂದುಳಿದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಧಾರ್ಮಿಕ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ರದ್ದು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರವನ್ನು ಸಿಪಿಐಎಂಎಲ್ ರೆಡ್‍ಸ್ಟಾರ್ ರಾಜ್ಯ ಸಮಿತಿ ಸದಸ್ಯ ಎಂ.ಗಂಗಾಧರ್ ಖಂಡಿಸಿದ್ದಾರೆ.

ಶುಕ್ರವಾರ ಹೇಳಿಕೆ ನೀಡಿರುವ ಅವರು ‘ಈಗಾಗಲೇ ಕೋವಿಡ್ ಮತ್ತಿತರ ಕಾರಣಗಳಿಂದ ಎಲ್ಲ ವರ್ಗದ ಬಡವರ ಮಕ್ಕಳು ಶಾಲೆಗಳಿಂದ ಹೊರಗುಳಿದು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಶೈಕ್ಷಣಿಕ ಕ್ಷೇತ್ರವನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳಿದ್ದ ಮೋದಿ ಸರ್ಕಾರ ಈಗ ವಿದ್ಯಾರ್ಥಿ ವೇತನವನ್ನು ರದ್ದುಗೊಳಿಸಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಿಮುಖಗೊಳ್ಳುವಂತೆ ಮಾಡಿರುವುದು ಅನುಮಾನಕ್ಕೆ ಕಾರಣವಾಗಿದೆ. ಬಡವರ ಮಕ್ಕಳು ಶಿಕ್ಷಣ ಪಡೆಯದೆ ಗುಲಾಮರಾಗಬೇಕು ಎನ್ನುವುದು ಮನುವಾದಿ ಬಿಜೆಪಿ ಸರ್ಕಾರದ ಹುನ್ನಾರವಾಗಿದೆ’ ಎಂದು ದೂರಿದ್ದಾರೆ.

‘ಕಳೆದ ವರ್ಷ ಸುಮಾರು 60 ಲಕ್ಷ ಮಂದಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಫ್ ರದ್ದು ಮಾಡಿದ್ದಾರೆ. ಹಾಗೆಯೇ ಸುಮಾರು 2000 ಸಂಶೋಧನಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಲ್ಲ. ಜತೆಗೆ ವಿದೇಶಗಳಿಗೆ ಹೋಗುವ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ನಿಲ್ಲಿಸಲಾಗಿದೆ. ಇದರಿಂದ ಹಿಂದುಳಿದ, ಧಾರ್ಮಿಕ ಅಲ್ಪಸಂಖ್ಯಾತರ ಮತ್ತು ಎಸ್ಸಿ, ಎಸ್ಟಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದು ಬಿಜೆಪಿ ಸರ್ಕಾರದ ಉದ್ದೇಶವಾಗಿದೆ. ತಕ್ಷಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಸ್ಸಿ, ಎಸ್ಟಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿರೋಧಿ ನಿಲುವನ್ನು ಬದಲಾಯಿಸಿಕೊಂಡು, ವಿದ್ಯಾರ್ಥಿ ವೇತನ ನಿಲ್ಲಿಸುವ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ವಿದ್ಯಾರ್ಥಿಗಳ ಜೊತೆಗೂಡಿ ಉಗ್ರ ಸ್ವರೂಪದ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.