ADVERTISEMENT

ರಾಯಚೂರು | ಭಾರಿ ಮಳೆ ಸಾಧ್ಯತೆ: ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಕೇಂದ್ರ ಸ್ಥಾನದಲ್ಲಿರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೀಶ್ ತಾಕೀತು

​ಪ್ರಜಾವಾಣಿ ವಾರ್ತೆ
Published 9 ಜೂನ್ 2025, 12:58 IST
Last Updated 9 ಜೂನ್ 2025, 12:58 IST
ನಿತೀಶ್.ಕೆ
ನಿತೀಶ್.ಕೆ   

ರಾಯಚೂರು: ‘ಹವಾಮಾನ ಇಲಾಖೆಯ ಪ್ರಕಾರ ಮೇ 24ರಂದು ನೈಋತ್ಯ ಮುಂಗಾರು ಕೇರಳ ಪ್ರವೇಶಿಸಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಿತೀಶ್ ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

‘ಜಿಲ್ಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಭಾರಿ ಮಳೆ ಹಾಗೂ ಪ್ರವಾಹ ಎದುರಾದಲ್ಲಿ ಸಮರ್ಥವಾಗಿ ಎದುರಿಸಲು ಜಿಲ್ಲಾ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಸಿದ್ಧರಿರಬೇಕು’ ಎಂದು ಹೇಳಿದ್ದಾರೆ.

‘ಜಿಲ್ಲಾ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿದ್ದು ಪ್ರವಾಹ ಹಾಗೂ ಭಾರಿ ಮಳೆಯಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನದಿ, ಹಳ್ಳ ಮತ್ತು ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ ಅಥವಾ ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸಬೇಕು’ ಎಂದು ಸೂಚಿಸಿದ್ದಾರೆ.

ADVERTISEMENT

‘ಪ್ರತಿ ಗ್ರಾಮಗಳಲ್ಲಿಯೂ ಡಂಗೂರ ಸಾರಬೇಕು. ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ಭಾರಿ ಮಳೆ ಹಾಗೂ ಪ್ರವಾಹದಿಂದ ಹಾನಿಯಾದ ಬಗ್ಗೆ ಪ್ರಾಥಮಿಕ ವರದಿಯನ್ನು ಪ್ರತಿ ದಿನ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು’ ಎಂದು ಸೂಚನೆ ನೀಡಿದ್ದಾರೆ.

ಸಹಾಯವಾಣಿ

ಮಳೆ ಹಾಗೂ ಪ್ರವಾಹ ಸೇರಿದಂತೆ ಇತರೆ ಸಮಸ್ಯೆಗಳ ತುರ್ತು ಪರಿಹಾರಕ್ಕಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ: 08532-226383 ಅಥವಾ ರಾಯಚೂರು ಜಿಲ್ಲಾಧಿಕಾರಿ ಕಚೇರಿ: 1077 ರಾಯಚೂರು ಮಹಾನಗರ ಪಾಲಿಕೆ: 08532-200551 ರಾಯಚೂರು ತಹಶೀಲ್ದಾರ್ ಕಚೇರಿ: 08532-200772 ಮಾನವಿ ತಹಶೀಲ್ದಾರ್ ಕಚೇರಿ: 08538-220239 ಸಿಂಧನೂರು ತಹಶೀಲ್ದಾರ್ ಕಚೇರಿ: 9035640154 ಲಿಂಗಸೂಗೂರು ತಹಶೀಲ್ದಾರ್ ಕಚೇರಿ: 08537-275247 ದೇವದುರ್ಗ ತಹಶೀಲ್ದಾರ್ ಕಚೇರಿ: 08531-200117 ಸಿರವಾರ ತಹಶೀಲ್ದಾರ್ ಕಚೇರಿ: 08538-200082 ಮಸ್ಕಿ ತಹಶೀಲ್ದಾರ್ ಕಚೇರಿ: ದೂ.ಸಂ: 08537-295504 ಸಂಪರ್ಕ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.